ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.
ಜುಲೈ 9ರಂದು ರೆಸ್ಟೋ ಬಾರ್‌ಗೆ ತೆರಳಿದ್ದ ಮಂಜು ಹಾಗೂ ಅವರ ಸ್ನೇಹಿತರು ಊಟ ಮತ್ತು ಮದ್ಯ ಸೇವಿಸಿದ ಬಳಿಕ ಬಿಲ್ ಪಾವತಿಸುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಹೊರಡುವಾಗ ಅವರನ್ನು ತಡೆದು ಸೆಲ್ಫಿ ಕೇಳಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯಲ್ಲಿ ಮಧ್ಯಪ್ರವೇಶಿಸಿದ ಪಬ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸುತ್ತಿದ್ದಾರೆ.



