ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಹಿನ್ನಡೆ ನೀಡಿದ್ದು, ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸುವ ಮೂಲಕ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.
ಈ ತೀರ್ಪಿನೊಂದಿಗೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಕಾನೂನು ಹೋರಾಟದಲ್ಲಿ ಮೇಲುಗೈ ದೊರೆತಿದೆ.
2021ರ ಡಿಸೆಂಬರ್ನಲ್ಲಿ ನಡೆದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಒಟ್ಟು 2,410 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 39 ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು. ಪ್ರಾಣೇಶ್ 1,188 ಮತಗಳನ್ನು, ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದಿದ್ದು, ಕೇವಲ ಆರು ಮತಗಳ ಅಂತರದಿಂದ ಪ್ರಾಣೇಶ್ ಗೆಲುವು ಸಾಧಿಸಿದ್ದರು.
ಆದರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿರುವುದು ಕಾನೂನುಬಾಹಿರ ಎಂದು ಆರೋಪಿಸಿ ಗಾಯತ್ರಿ ಶಾಂತೇಗೌಡ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಅದೇ ತೀರ್ಪನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದ್ದು, ಪ್ರಾಣೇಶ್ ಅವರ ಸದಸ್ಯತ್ವ ರದ್ದಾಗಿದೆ.



