ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನಿವಾಸದಲ್ಲಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಅಂತಿಮ ರೂಪುರೇಷೆ ಕುರಿತು ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿರುವುದಾಗಿ ತಿಳಿದುಬಂದಿದೆ.
ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳಿಗೆ ಸುಮಾರು 50ಕ್ಕೂ ಹೆಚ್ಚು ಶಾಸಕರು ಮತ್ತು ನಾಯಕರು ತೀವ್ರ ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿ ಯಾವ ಸಮೀಕರಣಕ್ಕೆ ಆದ್ಯತೆ ನೀಡಲಾಗುತ್ತದೆ ಎಂಬುದರತ್ತ ಕಾಂಗ್ರೆಸ್ ವಲಯದ ಗಮನ ನೆಟ್ಟಿದೆ.
ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ಪಕ್ಷ ಸಂಘಟನೆ ಬಲಪಡಿಸುವ ಕುರಿತೂ ಸಭೆಯಲ್ಲಿ ಚರ್ಚೆ ನಡೆದಿದೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಪ್ರಚಾರ ಸಮಿತಿ ಅಧ್ಯಕ್ಷರ ಆಯ್ಕೆ, ಕೆಪಿಸಿಸಿ ಮಹಿಳಾ ಕಾರ್ಯಾಧ್ಯಕ್ಷೆಯ ನೇಮಕ ಹಾಗೂ ನೂತನ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ನೇಮಕ ಕುರಿತೂ ವರಿಷ್ಠರು ಹಾಗೂ ರಾಜ್ಯ ನಾಯಕರು ಸಮಾಲೋಚನೆ ನಡೆಸಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರು ಹೈಕಮಾಂಡ್ ಜತೆ ಸರಣಿ ಸಭೆಗಳಲ್ಲಿ ಭಾಗವಹಿಸಿದ್ದು, ಸಚಿವ ಸಂಪುಟ ವಿಸ್ತರಣೆ ಮತ್ತು ಪಕ್ಷದ ಸಂಘಟನೆ ಕುರಿತ ಅಂತಿಮ ನಿರ್ಧಾರ ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆ ವ್ಯಕ್ತವಾಗಿದೆ.



