ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಪವಿತ್ರ ದಿನದಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿತ್ತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಹಲವು ವರ್ಷಗಳ ಹಿಂದೆ ಹೊತ್ತಿದ್ದ ಹರಕೆಯನ್ನು ನೆರವೇರಿಸಿದರು.
ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಚಾಮುಂಡೇಶ್ವರಿಗೆ ಸೀರೆ ಅರ್ಪಿಸುವುದಾಗಿ ಉಷಾ ಶಿವಕುಮಾರ್ ಅವರು ಹರಕೆ ಹೊತ್ತಿದ್ದರು ಎನ್ನಲಾಗಿದೆ. ಅದರಂತೆ ಇಂದು ದೇವಾಲಯಕ್ಕೆ ಆಗಮಿಸಿದ ಅವರು ರೇಷ್ಮೆ ಸೀರೆಯನ್ನು ಕಾಣಿಕೆಯಾಗಿ ನೀಡಿ ದೇವಿಯ ಆಶೀರ್ವಾದ ಪಡೆದರು.
ದೇವಾಲಯದ ಪ್ರಧಾನ ಅರ್ಚಕರು ಹಾಗೂ ಆಡಳಿತ ಮಂಡಳಿ ಸೀರೆಯನ್ನು ದೇವಿಗೆ ಉಡಿಸಿ ವಿಶೇಷ ಅಲಂಕಾರ ಮಾಡಿದರು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.
ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಆಗಮಿಸಿದ್ದು, ವಿಶೇಷ ಪೂಜೆಗಳು ನಡೆಯುತ್ತಿವೆ.
ಇನ್ನು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕೂಡ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ವಿವಿಐಪಿ ದರ್ಶನ ವ್ಯವಸ್ಥೆಯ ಮೂಲಕ ದೇವಾಲಯಕ್ಕೆ ಆಗಮಿಸಿದ ಅವರು ವಿಶೇಷ ಪೂಜೆ ಸಲ್ಲಿಸಿ ವಾಪಸ್ ತೆರಳಿದರು.



