ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕ್ಷೇತ್ರವನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ವಿಶೇಷ ನೆರವು ಘೋಷಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಮಳೆಯ ಕೊರತೆಯಿಂದ ಕ್ಷೇತ್ರದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿವರಿಸಿದರು.
ಮಳೆ ಇಲ್ಲದ ಕಾರಣ ಭೂಮಿಯಲ್ಲಿನ ತೇವಾಂಶ ಸಂಪೂರ್ಣವಾಗಿ ಕಳೆದು ಹೋಗಿದ್ದು, ಬೆಳೆಗಳು ನಾಶವಾಗುವ ಹಂತ ತಲುಪಿವೆ. ಬಿತ್ತನೆಗಾಗಿ ಬ್ಯಾಂಕ್‌ಗಳು ಹಾಗೂ ಖಾಸಗಿ ಮೂಲಗಳಿಂದ ಸಾಲ ಪಡೆದು ಬೀಜ, ರಸಗೊಬ್ಬರ ಮತ್ತು ಕೃಷಿ ಚಟುವಟಿಕೆಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದ ರೈತರಿಗೆ ಇದೀಗ ಸಂಕಷ್ಟ ಎದುರಾಗಿದೆ ಎಂದು ಹೇಳಿದರು.
ಕುಡಿಯುವ ನೀರಿನ ಮೂಲಗಳಾದ ಕೆರೆ, ಕೊಳವೆಬಾವಿಗಳು ಬತ್ತುತ್ತಿರುವುದರಿಂದ ಜಾನುವಾರುಗಳಿಗೆ ನೀರು ಮತ್ತು ಮೇವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪಶುಗಳನ್ನು ಸಾಕುವುದು ಕಷ್ಟವಾಗಿರುವ ಕಾರಣ ಅನೇಕ ರೈತರು ತಮ್ಮ ಜಾನುವಾರುಗಳನ್ನು ಸಂತೆಗೆ ಕೊಂಡೊಯ್ದು ಮಾರಾಟ ಮಾಡುವ ಅನಿವಾರ್ಯತೆ ಎದುರಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ರೈತರ ಸಂಕಷ್ಟವನ್ನು ಮನಗಂಡು ಸರ್ಕಾರ ತಕ್ಷಣವೇ ಶಿರಹಟ್ಟಿ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸುವುದರ ಜೊತೆಗೆ ಬೆಳೆಹಾನಿಯ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರ ವಿತರಣೆ, ಬೆಳೆ ಸಾಲ ಮರುಪಾವತಿಗೆ ಕಾಲಾವಕಾಶ, ಬಡ್ಡಿ ಮನ್ನಾ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ವಿಶೇಷ ಪ್ಯಾಕೇಜ್ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ವಿಶೇಷ ಅನುದಾನ ಬಿಡುಗಡೆ ಮಾಡಿ ಶಿರಹಟ್ಟಿ ಕ್ಷೇತ್ರದ ರೈತರ ಹಿತರಕ್ಷಣೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನ ಕಾರ್ಯದರ್ಶಿಗೆ ಶಾಸಕರು ಮನವಿ ಸಲ್ಲಿಸಿದರು.
“ಮಳೆಯ ಅಭಾವದಿಂದ ಶಿರಹಟ್ಟಿ ಕ್ಷೇತ್ರದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸರ್ಕಾರ ವಿಳಂಬ ಮಾಡದೆ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.”
– ಡಾ. ಚಂದ್ರು ಲಮಾಣಿ, ಶಾಸಕ, ಶಿರಹಟ್ಟಿ ಕ್ಷೇತ್ರ



