ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸೌಲಭ್ಯಗಳು ಯಾವುದೇ ಲೋಪದೋಷಗಳಿಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ಕಾನ್ಫರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಡಿಯೊ ಸಂವಾದದ ಮೂಲಕ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತಪ್ಪು ಮಾಹಿತಿ ನೀಡಿ ಯೋಜನೆಗಳ ಲಾಭ ಪಡೆದವರಿಂದ ನಿಯಮಾನುಸಾರ ಹಣವನ್ನು ವಸೂಲಿ ಮಾಡಿ, ಈ ಪ್ರಕ್ರಿಯೆಯನ್ನು ಎರಡು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ಇನ್ನೂ ನೋಂದಣಿ ಮಾಡಿಸಿಕೊಳ್ಳದ ಅರ್ಹ ಗ್ರಾಹಕರ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೆಸ್ಕಾಂ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಯಶಸ್ಸಿನ ಸಂಕೇತವಾಗಿ ಹಾಗೂ ಪರಿಸರ ಸಂರಕ್ಷಣೆಗಾಗಿ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಮೂಲಕ ಕನಿಷ್ಠ ಒಂದು ಬೇವಿನ ಅಥವಾ ಆಲದ ಮರ ನೆಡುವ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ), ಜುಲೈ 19ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದರು.
ಗದಗ ಜಿಲ್ಲೆಯ ಅಂಕಿ-ಅಂಶ
ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಮಾರ್ಚ್ 2026ರವರೆಗೆ ಗದಗ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 5,650 ಫಲಾನುಭವಿಗಳು ಮೃತಪಟ್ಟಿರುವುದು ದಾಖಲಾಗಿದೆ. ಇವರಲ್ಲಿ 2,207 ಮಂದಿಯ ಬ್ಯಾಂಕ್ ಖಾತೆಗಳಿಗೆ ಮರಣದ ಬಳಿಕವೂ ಒಟ್ಟು 11,978 ಕಂತುಗಳ ರೂಪದಲ್ಲಿ ₹2.39 ಕೋಟಿ (₹2,39,56,000) ಹಣ ಜಮೆಯಾಗಿರುವುದು ಪತ್ತೆಯಾಗಿದೆ.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷರಾದ ಅಶೋಕ್ ಮಂದಾಲಿ, ಡಿ.ಡಿ. ಮೊರನಾಳ, ಸದಸ್ಯ ಕೃಷ್ಣಗೌಡ ಎಚ್. ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧಾ ಮಣ್ಣೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹುಲಿಗೆಮ್ಮ ಜೋಗೇರ, ಹೆಸ್ಕಾಂ ಅಧೀಕ್ಷಕ ಇಂಜಿನಿಯರ್ ನಜ್ಮನ್ನಿಸ್ ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದವರಿಗೆ ಆಸರೆಯಾಗಿವೆ. ಯಾವುದೇ ಕಾರಣಕ್ಕೂ ಅನರ್ಹರು ಇದರ ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬಾರದು. ಅರ್ಹರಿಗೆ ಮಾತ್ರ ಯೋಜನೆಗಳ ಸೌಲಭ್ಯ ತಲುಪುವಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.”
– ಎಚ್.ಎಂ. ರೇವಣ್ಣ, ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ



