ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಚೆನ್ನಮ್ಮ ಅವರ ಆರೋಗ್ಯವನ್ನು ತಜ್ಞ ವೈದ್ಯರ ತಂಡ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.
ಜುಲೈ 17ರಂದು ಆರೋಗ್ಯದಲ್ಲಿ ದಿಢೀರ್ ವ್ಯತ್ಯಯ ಕಂಡುಬಂದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಆರೋಗ್ಯದ ಮಾಹಿತಿ ಪಡೆದುಕೊಂಡರು. ಈ ಬೆಳವಣಿಗೆಯಿಂದ ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಚೆನ್ನಮ್ಮ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಸೊಸೆ ಭವಾನಿ ರೇವಣ್ಣ ರಾತ್ರಿಯಿಡೀ ಆಸ್ಪತ್ರೆಯಲ್ಲೇ ಉಳಿದು ಆರೋಗ್ಯದ ಆರೈಕೆ ಮಾಡಿದ್ದಾರೆ.
ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಚೆನ್ನಮ್ಮ ಅವರು ಶೀಘ್ರ ಚೇತರಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ಕುಟುಂಬ ಸದಸ್ಯರು ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ವೈದ್ಯರ ತಂಡ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಿದ್ದು, ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.



