ಬೆಂಗಳೂರು: ಕರ್ನಾಟಕದ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸುವಂತೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಶಿರಾದಲ್ಲಿ ಸ್ಥಾಪಿಸಿದರೆ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಸೋಮಣ್ಣ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಸೋಮಣ್ಣ ಅವರ ಪ್ರಕಾರ, ಕಳೆದ ವರ್ಷದ ಮಾರ್ಚ್ 20ರಂದು ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳ ಶಾಸಕರು ಶಿರಾ ಬಳಿ ವಿಮಾನ ನಿಲ್ದಾಣ ನಿರ್ಮಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಏಪ್ರಿಲ್ 22ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಜನಪ್ರತಿನಿಧಿಗಳ ಅಭಿಪ್ರಾಯವನ್ನು ತಿಳಿಸಿದ್ದಾಗಿ ಹೇಳಿದ್ದಾರೆ.
ಕರ್ನಾಟಕದ ಅಭಿವೃದ್ಧಿ ಈಗಾಗಲೇ ಬೆಂಗಳೂರು ಕೇಂದ್ರಿತವಾಗಿದ್ದು, ರಾಜ್ಯದ ಎಲ್ಲ ಭಾಗಗಳಿಗೂ ಸಮಾನ ಅಭಿವೃದ್ಧಿ ಅವಕಾಶ ಕಲ್ಪಿಸುವುದು ಅಗತ್ಯವಾಗಿದೆ. ಬೆಂಗಳೂರಿನ ಸಮೀಪವೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಿದರೆ ಮಧ್ಯ ಮತ್ತು ಉತ್ತರ ಕರ್ನಾಟಕ ಭಾಗಗಳ ಅಭಿವೃದ್ಧಿಗೆ ನಿರೀಕ್ಷಿತ ಪ್ರಯೋಜನ ದೊರೆಯುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನ ಶಿರಾ ಬಳಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹಲವು ಅನುಕೂಲಕರ ಅಂಶಗಳಿವೆ ಎಂದು ಸೋಮಣ್ಣ ವಿವರಿಸಿದ್ದಾರೆ. ಶಿರಾ ಸುತ್ತಮುತ್ತ ಮುಂಬೈ–ಬೆಂಗಳೂರು ಕೈಗಾರಿಕಾ ಕಾರಿಡಾರ್, ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ (NIMZ), ಚೆನ್ನೈ–ಬೆಂಗಳೂರು ಕೈಗಾರಿಕಾ ಕಾರಿಡಾರ್ ಹಾಗೂ KIADB ಕೈಗಾರಿಕಾ ಪ್ರದೇಶಗಳು ಇವೆ. ಅಲ್ಲದೇ, NH-48, NH-69, NH-544E ಸೇರಿದಂತೆ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕವೂ ಇದೆ ಎಂದು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಸರ್ಕಾರಿ ಭೂಮಿ ಲಭ್ಯವಿದ್ದು, ಭದ್ರಾ ಮೇಲ್ದಂಡೆ ಕಾಲುವೆ, ಹೇಮಾವತಿ ಹಾಗೂ ಎತ್ತಿನಹೊಳೆ ಯೋಜನೆಗಳಿಂದ ನೀರಿನ ಸೌಲಭ್ಯವೂ ದೊರೆಯಲಿದೆ ಎಂದು ಹೇಳಿದ್ದಾರೆ. ಜೊತೆಗೆ ಚಿತ್ರದುರ್ಗದ DRDO, IISc ಕ್ಯಾಂಪಸ್ ಹಾಗೂ ತುಮಕೂರಿನ ಗುಬ್ಬಿಯಲ್ಲಿರುವ HAL ಹೆಲಿಕಾಪ್ಟರ್ ಘಟಕಗಳು ಸಮೀಪದಲ್ಲಿರುವುದು ಮತ್ತೊಂದು ಅನುಕೂಲಕರ ಅಂಶವಾಗಿದೆ ಎಂದು ಉಲ್ಲೇಖಿಸಿದ್ದಾರೆ.
DGCA ನಿಯಮಗಳ ಪ್ರಕಾರ ಶಿರಾ ಪ್ರದೇಶವು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿದ್ದು, ಮಧ್ಯ ಹಾಗೂ ಉತ್ತರ ಕರ್ನಾಟಕದ ಜನರಿಗೆ ಅಂತಾರಾಷ್ಟ್ರೀಯ ಪ್ರಯಾಣ ಮತ್ತು ಸರಕು ಸಾಗಣೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಕೈಗಾರಿಕೆಗಳ ಬೆಳವಣಿಗೆ, ಉದ್ಯೋಗ ಸೃಷ್ಟಿ, ಹೂಡಿಕೆ ಹೆಚ್ಚಳ ಹಾಗೂ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ. ಇದರಿಂದ ರಾಜ್ಯದ ಸಮತೋಲಿತ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ತುಮಕೂರಿನ ಶಿರಾ ಭಾಗದಲ್ಲಿಯೇ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಕುರಿತು ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.



