ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದಿಂದ ಬಿಡುಗಡೆಯಾಗುವ ಪ್ರತಿಯೊಂದು ರೂಪಾಯಿಯೂ ಸಾರ್ವಜನಿಕರ ಹಿತಕ್ಕಾಗಿ ಸಮರ್ಪಕವಾಗಿ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ದುರ್ಬಳಕೆ ಅಥವಾ ಅಪವ್ಯಯವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಸರ್ಕಾರದ ಯೋಜನೆಗಳ ಲಾಭ ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ನಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯತ್ ಅನುದಾನದ ಕ್ರಿಯಾ ಯೋಜನೆ, ಜಿಲ್ಲಾ ವಲಯದಡಿ ವಲಯವಾರು ಅನುದಾನ ಹಂಚಿಕೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ನಲ್ಲಿ ಶೇ.60ರಷ್ಟು ಅನುದಾನವನ್ನು ವೇತನಕ್ಕಾಗಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ನೀಡಿದ ಅನುದಾನದಲ್ಲಿ ಶೇ.95ರಷ್ಟು ಮೊತ್ತವನ್ನು ವೇತನಕ್ಕಾಗಿ ಮೀಸಲಿಡಲು ಸಭೆಯಲ್ಲಿ ಅನುಮೋದನೆ ದೊರೆಯಿತು.
ಇಲಾಖಾವಾರು ರೂಪಿಸಲಾದ ಯೋಜನೆಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿದ ಡಾ. ವೆಂಕಟೇಶ್, ಅಕ್ಷರ ದಾಸೋಹ ಯೋಜನೆಯಡಿ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಕೆಯಾಗುವಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ್ ಜೋಡೋ ಯುವಕ ಮಂಡಳಗಳ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡುವಂತೆಯೂ ನಿರ್ದೇಶಿಸಿದರು.
ಆರೋಗ್ಯ ಇಲಾಖೆಯ ಕಾರ್ಯವೈಖರಿ ಪರಿಶೀಲಿಸಿದ ಅವರು, ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ, ಅಗತ್ಯ ಔಷಧಗಳ ಸಮರ್ಪಕ ಖರೀದಿ ಹಾಗೂ ಲಭ್ಯತೆ ಖಚಿತಪಡಿಸಿಕೊಳ್ಳಬೇಕು ಎಂದರು. ಚೀನಾ ನಿರ್ಮಿತ ಬೆಡ್ಗಳ ಖರೀದಿಯನ್ನು ತಪ್ಪಿಸುವಂತೆ ಸೂಚಿಸಿದ ಅವರು, ಗುಣಮಟ್ಟದ ಔಷಧ ಖರೀದಿಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಆಯುಷ್ ಇಲಾಖೆಗೆ ಹಿಂದಿನ ಸಭೆಯಲ್ಲಿ ಔಷಧ ಖರೀದಿಗಾಗಿ ನೀಡಿದ್ದ ಅನುದಾನದ ಬಳಕೆ ಕುರಿತು ಮಾಹಿತಿ ಪಡೆದು, ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು. ಜಿಲ್ಲೆಯ ಎಲ್ಲ ಆರ್ಒ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಕೈಗೊಂಡು, ಲಿಂಕ್ ಯೋಜನೆಯ ಉದ್ದೇಶ ಯಶಸ್ವಿಯಾಗಬೇಕು ಎಂದು ಹೇಳಿದರು.
ಸಾಮಾಜಿಕ ಅರಣ್ಯ ಇಲಾಖೆಯ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಆರ್ಎಫ್ಒಗಳು ವಿಬಿಜಿ ರಾಮ್ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಸ್ಥಳೀಯ ಹವಾಮಾನಕ್ಕೆ ಹೊಂದುವ ಗಿಡಗಳನ್ನು ಬೆಳೆಸುವಂತೆ ಸೂಚಿಸಿದರು.
ಪ್ರತಿ ತಾಲೂಕಿನಲ್ಲಿ ಮಿಯಾವಾಕಿ ಅರಣ್ಯ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಬೇಕು. ಶಾಲಾ ಆವರಣಗಳಲ್ಲಿ ಕರಿಬೇವು, ನಿಂಬೆ, ನೆಲ್ಲಿ ಹಾಗೂ ಪಪ್ಪಾಯಿ ಗಿಡಗಳನ್ನು ಕಡ್ಡಾಯವಾಗಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಡಿಡಿಪಿಐ ಆರ್.ಎಸ್. ಬುರಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
“ಸರ್ಕಾರದ ಯೋಜನೆಗಳು ಕಾಗದದಲ್ಲಷ್ಟೇ ಉಳಿಯಬಾರದು. ಸರ್ಕಾರದ ಪ್ರತಿಯೊಂದು ರೂಪಾಯಿ ಅರ್ಹ ಫಲಾನುಭವಿಗೆ ತಲುಪಬೇಕು. ಅನುದಾನದ ಸದ್ಬಳಕೆ, ಪಾರದರ್ಶಕತೆ ಹಾಗೂ ಗುಣಮಟ್ಟದ ಸೇವೆ ನೀಡುವಲ್ಲಿ ಅಧಿಕಾರಿಗಳು ಯಾವುದೇ ರಾಜಿ ಮಾಡಿಕೊಳ್ಳಬಾರದು. ನಿರ್ಲಕ್ಷ್ಯ ಕಂಡುಬಂದರೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.”
– ಡಾ. ಎಂ.ವಿ. ವೆಂಕಟೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
“ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನೀಡಿರುವ ಎಲ್ಲ ನಿರ್ದೇಶನಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸಲಾಗುವುದು. ಪ್ರತಿಯೊಂದು ಇಲಾಖೆಯ ಕಾರ್ಯಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಅನುದಾನದ ಸಮರ್ಪಕ ಬಳಕೆ ಹಾಗೂ ಜನಸೇವೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ



