ವಿಜಯಸಾಕ್ಷಿ ಸುದ್ದಿ, ಡಂಬಳ: ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾರ್ವತಿ ಹೊಂಬಳ ಹೇಳಿದರು.
ಡಂಬಳ ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರ ಸಂಯುಕ್ತ ಆಶ್ರಯದಲ್ಲಿ ಗೃಹಲಕ್ಷ್ಮಿ ಯೋಜನೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಅರಳಿ ಹಾಗೂ ಬೇವು ಗಿಡಗಳನ್ನು ನೆಡುವ ಮೂಲಕ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಮೇಲ್ವಿಚಾರಕಿ ಎಸ್.ಎಸ್. ಹಾದಿಮನಿ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಾಂದಬಿ ಅಣ್ಣಿಗೇರಿ ಮಾತನಾಡಿ, ಮಹಿಳೆಯರ ಸ್ವಾವಲಂಬನೆಗೆ ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯಲ್ಲಪ್ಪ ಹಾದಿಮನಿ, ಗೌಸಿದ್ಧಪ್ಪ ಹಳ್ಳಾಕಾರ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಹಾಯಕಿಯರು ಹಾಗೂ ಮಹಿಳೆಯರು ಭಾಗವಹಿಸಿದ್ದರು.



