ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಡೆಲ್ಲಿಯಿಂದ ಬೆಂಗಳೂರಿಗೆ ಸಪ್ಲೈ ಆಗುತ್ತಿದ್ದ ಎಂಡಿಎಂಎ ಹಾಗೂ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಸಾಹೀಲ್ ಕುಮಾರ್, ಸತ್ಯಂ ಮತ್ತು ಕಲೀಮ್ ಕನ್ನಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ವ್ಯಕ್ತಿಯೊಬ್ಬರಿಂದ ಎಂಡಿಎಂಎ ಪಡೆದು ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಸಾಹೀಲ್ ಕುಮಾರ್ ಸೂಚನೆಯ ಮೇರೆಗೆ ಸತ್ಯಂ, ಕಲೀಮ್ ಮತ್ತು ಕನ್ನಯ್ಯ ಮಾದಕ ವಸ್ತುಗಳನ್ನು ತಲುಪಿಸಲು ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಹಿಂದೆ ಬಂಧನಕ್ಕೊಳಗಾಗಿದ್ದ ವಿಕ್ಟರ್ ಮತ್ತು ಮೋಸಸ್ ನೀಡಿದ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತರಿಂದ ಸುಮಾರು 26.60 ಲಕ್ಷ ರೂಪಾಯಿ ಮೌಲ್ಯದ 12 ಕೆಜಿ 925 ಗ್ರಾಂ ಎಂಡಿಎಂಎ ಹಾಗೂ 60 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದೇ ವೇಳೆ ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆ ನಡೆಸಿ, ರಾಜಸ್ಥಾನದಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಲುಂಬುರಾಮ್ ಮತ್ತು ಅನುಪ್ ರಾಮ್ ಎಂಬುವವರನ್ನು ಬಂಧಿಸಿದ್ದಾರೆ.
ಬಂಧಿತರಿಂದ 7 ಕೆಜಿ ಆಫೀಮು ಹಾಗೂ 225 ಗ್ರಾಂ ಎಂಡಿಎಂಎಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಗಳ ಕುರಿತು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



