ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈವರೆಗೆ 23 ಮಂದಿ ಮೃತಪಟ್ಟಿದ್ದಾರೆ.
ಭಾರೀ ಮಳೆ ಹಾಗೂ ಭೂಕುಸಿತದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪೂಂಚ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿ ನಾಲ್ವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ರಗ್ಗಿ ನಲ್ಲಾ ಬಳಿ ಗುಡ್ಡ ಕುಸಿದ ಪರಿಣಾಮ ಹಲವು ವಾಹನಗಳು ಸಿಲುಕಿಕೊಂಡಿವೆ. ಮತ್ತೊಂದು ಘಟನೆಯಲ್ಲಿ ಬಸ್ ಮೇಲೆ ಬೃಹತ್ ಬಂಡೆ ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಇದೇ ವೇಳೆ ದಕ್ಷಿಣ ಸಿಕ್ಕಿಂನ ಸಮರ್ದುಂಗ್ ಬಳಿ ಇರುವ ಜಲವಿದ್ಯುತ್ ಯೋಜನೆಯ ಸುರಂಗ ಮಾರ್ಗದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಸುರಂಗದೊಳಗೆ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 10 ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ 17 ಮಂದಿ ಸುರಂಗದೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ನಾಮ್ಚಿ ಜಿಲ್ಲೆಯ ತೀಸ್ತಾ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.
ಸಿಕ್ಕಿಂ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.



