HomeGadag Newsಭಾರಿ ಗಾತ್ರದ ವಿಂಡ್‌ಮಿಲ್ ವಾಹನಗಳಿಗೆ ಕರವೇ ತಡೆ

ಭಾರಿ ಗಾತ್ರದ ವಿಂಡ್‌ಮಿಲ್ ವಾಹನಗಳಿಗೆ ಕರವೇ ತಡೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ–ಮುಳಗುಂದ–ಲಕ್ಷ್ಮೇಶ್ವರ ರಸ್ತೆಯಲ್ಲಿ ಸಂಚರಿಸುತ್ತಿರುವ ಭಾರಿ ಗಾತ್ರದ ವಿಂಡ್‌ಮಿಲ್ (ವಿಂಡ್ ಪವರ್) ಉಪಕರಣ ಸಾಗಣೆ ವಾಹನಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗದಗ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ನಗರದ ಅಂಜುಮನ್ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಭಾರಿ ಗಾತ್ರದ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಈ ಕುರಿತು ಹಲವು ಬಾರಿ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ, ಸೆರೆಂಟಿಕಾ ಕಂಪನಿಯ ವಿಂಡ್‌ಮಿಲ್ ಉಪಕರಣ ಸಾಗಣೆ ವಾಹನಗಳು ಹಗಲು-ರಾತ್ರಿ ನಿರಂತರವಾಗಿ ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಇದರಿಂದ ರಸ್ತೆಗಳು ಹಾಳಾಗುವುದರ ಜೊತೆಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ನಿತ್ಯ ಸಂಚಾರ ದಟ್ಟಣೆಯಲ್ಲಿ ಸಿಲುಕುವಂತಾಗಿದೆ ಎಂದು ದೂರಿದರು.

ಜಿಲ್ಲಾಸ್ಪತ್ರೆ, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಅಂಜುಮನ್ ಕಾಲೇಜು ಸೇರಿದಂತೆ ಪ್ರಮುಖ ಸಂಸ್ಥೆಗಳು ಇದೇ ರಸ್ತೆಯಲ್ಲಿದ್ದು, ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯೂ ಇದಾಗಿದೆ. ಪ್ರತಿಭಟನೆ ನಡೆದ ದಿನವೇ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬುಲೆನ್ಸ್‌ನಲ್ಲಿದ್ದ ರೋಗಿ ತೀವ್ರ ತೊಂದರೆ ಅನುಭವಿಸಿದ ಘಟನೆ ಕಣ್ಣಾರೆ ಕಂಡಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಭಾರಿ ಗಾತ್ರದ ವಾಹನಗಳಿಗೆ ಪ್ರತ್ಯೇಕ ರಸ್ತೆ ವ್ಯವಸ್ಥೆ ಕಲ್ಪಿಸಿ, ಸಾರ್ವಜನಿಕ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಬೇಕು. ಅಲ್ಲದೆ ಎಚ್.ಪಿ. ಪೆಟ್ರೋಲ್ ಬಂಕ್ ಎದುರಿನ ರಸ್ತೆ ಡಿವೈಡರ್ ತೆರವುಗೊಳಿಸಿ ಹಾನಿಗೊಳಿಸಿರುವ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ಗದಗ–ಮುಳಗುಂದ–ಲಕ್ಷ್ಮೇಶ್ವರ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾರುತಿ ಈಳಗೇರ, ಕುಮಾರ ರೇವಣ್ಣವರ, ಸಮೀರ್ ಬಾಳಿಕಾಯಿ, ವಿನಾಯಕ ಬಡಿ, ದಾವಲಸಾಬ ತಹಶೀಲ್ದಾರ, ಸಿರಾಜ್ ಹೊಸಮನಿ, ಯೂನಸ್ ಗದಗ, ಸುಲೇಮಾನ ಮಂಜಲಾಪುರ, ತೌಶೀಫ್ ಢಾಲಾಯತ್, ಕೃಷ್ಣಾ ಲಮಾಣಿ ಸೇರಿದಂತೆ ಕರವೇ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img