ಮಂಗಳೂರು: 14 ವರ್ಷಗಳ ಹಿಂದೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದ್ದು, ತನಿಖೆಯ ಜವಾಬ್ದಾರಿ ಯಾರಿಗೆ ನೀಡಬೇಕು ಎಂಬ ಬಗ್ಗೆ ಮಹತ್ವದ ಆದೇಶ ಹೊರಬೀಳಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆದಿದೆ.
ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮರುತನಿಖೆ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ವಿರುದ್ಧ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
“14 ವರ್ಷಗಳು ಕಳೆದರೂ ಸರಿಯಾದ ತನಿಖೆ ನಡೆದಿಲ್ಲ. ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ. ಸಿಐಡಿ ವರದಿಯನ್ನೇ ಆಧಾರವಾಗಿಸಿಕೊಂಡು ತನಿಖೆ ನಡೆಸಲಾಗಿದೆ ಎಂಬ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿ” ಎಂದು ನ್ಯಾಯಾಲಯ ಸಿಬಿಐ ಅಧಿಕಾರಿಗಳನ್ನು ಪ್ರಶ್ನಿಸಿದೆ.
ಹಿಂದೆ ಕೆಲವು ಆರೋಪಿಗಳ ವಿರುದ್ಧ ಇನ್ನೂ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದ ಸಿಬಿಐ, ಇದೀಗ ಸಿಬ್ಬಂದಿ ಕೊರತೆ ಮತ್ತು ಹಣಕಾಸಿನ ಸಮಸ್ಯೆಯನ್ನು ಕಾರಣವಾಗಿ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಇದೇ ವೇಳೆ ಕರ್ನಾಟಕ ಸರ್ಕಾರವು ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡ ಅಂದರೆ ಎಸ್‌ಐಟಿ ರಚಿಸಲು ಸಿದ್ಧವಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಆದರೆ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು, ಸಿಬಿಐ ತನಿಖೆಯ ಮೇಲೆ ನಂಬಿಕೆ ಇಲ್ಲ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಇದೀಗ ಎಲ್ಲರ ಗಮನ ಸುಪ್ರೀಂ ಕೋರ್ಟ್‌ನ ಅಂತಿಮ ಆದೇಶದತ್ತ ನೆಟ್ಟಿದೆ. ಮರುತನಿಖೆಯನ್ನು ಎಸ್‌ಐಟಿ ನಡೆಸಬೇಕೇ?
ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ವಿಶೇಷ ತಂಡ ತನಿಖೆ ನಡೆಸಬೇಕೇ? ಎಂಬುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಲಿದೆ.
14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಸೌಜನ್ಯ ಕುಟುಂಬಕ್ಕೆ ಈ ಬೆಳವಣಿಗೆ ಹೊಸ ನಿರೀಕ್ಷೆ ಮೂಡಿಸಿದೆ. ಸೌಜನ್ಯ ಪ್ರಕರಣದಲ್ಲಿ ನ್ಯಾಯದ ಹೋರಾಟಕ್ಕೆ ಈಗ ಹೊಸ ತಿರುವು ಸಿಕ್ಕಿದ್ದು, ಸುಪ್ರೀಂ ಕೋರ್ಟ್‌ನ ಮುಂದಿನ ಆದೇಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.



