ನವದೆಹಲಿ: ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ‘ಸಂಸದ್ ಚಲೋ’ ಕರೆ ನೀಡಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ನಡೆಸಿದ್ದಾರೆ. ಅಲ್ಲದೆ, ಪರಿಸ್ಥಿತಿ ನಿಯಂತ್ರಿಸಲು ಅಶ್ರುವಾಯು ಪ್ರಯೋಗಿಸಲಾಗಿದೆ.
ಟಾಲ್‌ಸ್ಟಾಯ್ ಮಾರ್ಗ ಹಾಗೂ ಜಂತರ್ ಮಂತರ್ ಸುತ್ತಮುತ್ತ ಘರ್ಷಣೆ ತೀವ್ರಗೊಂಡಿದ್ದು, ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಇಬ್ಬರು ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ 6ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ನುಸುಳಿದ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಲಾಠಿಗಳನ್ನು ಕಸಿದುಕೊಂಡು ಹಲ್ಲೆ ನಡೆಸಿರುವ ಆರೋಪವೂ ಕೇಳಿಬಂದಿದೆ. ಆಯೋಜಕರ ಮನವಿಯನ್ನೂ ಲೆಕ್ಕಿಸದೆ ಕೆಲವರು ಹಿಂಸಾಚಾರಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ದೆಹಲಿ ಹಾಗೂ ಜಂತರ್ ಮಂತರ್ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜ್ಯಾಮರ್‌ಗಳನ್ನು ಅಳವಡಿಸಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಹಾಗೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರ ಗುಂಪೊಂದು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ಹಾಗೂ ಬಾಟಲಿಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



