ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ಸುಪ್ರೀಂ ಕೋರ್ಟ್ ಭಾರೀ ಹಿನ್ನಡೆ ನೀಡಿದ್ದು, ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಪಡಿಸಿದೆ.
ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ತೀರ್ಪನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಪಿ.ಬಿ. ವರಾಲೆ ಅವರನ್ನೊಳಗೊಂಡ ಪೀಠ ಜಾಮೀನು ರದ್ದುಪಡಿಸಿ ಆದೇಶ ಹೊರಡಿಸಿದೆ.
ಆರೋಪಿ ಸೋನಂ ರಘುವಂಶಿ ಅವರು ಮೂರು ವಾರಗಳೊಳಗೆ ತನಿಖಾ ಸಂಸ್ಥೆ ಅಥವಾ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ತೀರ್ಪು ನೀಡುವ ವೇಳೆ ನ್ಯಾಯಪೀಠ, ಸೋನಂ ರಘುವಂಶಿ ವಿರುದ್ಧದ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿವೆ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಜಾಮೀನು ನೀಡಲು ಅವಕಾಶವಿಲ್ಲ ಎಂದು ತಿಳಿಸಿದೆ.
ಆದರೆ, ವಿಚಾರಣೆಯಲ್ಲಿ ವಿಳಂಬವಾದರೆ ಆರು ತಿಂಗಳ ಬಳಿಕ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಏನಿದು ಪ್ರಕರಣ?
ಮಧ್ಯಪ್ರದೇಶದ ಇಂದೋರ್ ಮೂಲದ ಸೋನಂ ರಘುವಂಶಿ ಮತ್ತು ರಾಜಾ ರಘುವಂಶಿ ದಂಪತಿ 2025ರ ಮೇ 23ರಂದು ಹನಿಮೂನ್‌ಗಾಗಿ ಮೇಘಾಲಯದ ಸೋಹ್ರಾ (ಚೆರಾಪುಂಜಿ) ಪ್ರದೇಶಕ್ಕೆ ತೆರಳಿದ್ದರು. ಬಳಿಕ ಇಬ್ಬರೂ ನಾಪತ್ತೆಯಾಗಿದ್ದು, ಜೂನ್ 2ರಂದು ರಾಜಾ ರಘುವಂಶಿ ಅವರ ಮೃತದೇಹ ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು.
ತನಿಖೆ ವೇಳೆ, ಆರ್ಥಿಕ ಲಾಭದ ಉದ್ದೇಶದಿಂದ ಸೋನಂ ರಘುವಂಶಿ ಬಾಡಿಗೆ ಹಂತಕರೊಂದಿಗೆ ಸೇರಿ ಪತಿಯ ಕೊಲೆಗೆ ಸಂಚು ರೂಪಿಸಿದ್ದರು ಎಂದು ಮೇಘಾಲಯ ಪೊಲೀಸರು ಆರೋಪಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.



