ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ಭಾಗಗಳ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕ ಡಾ. ಚಂದ್ರು ಲಮಾಣಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕರು, ಕ್ಷೇತ್ರದ ಅನೇಕ ಗ್ರಾಮಗಳ ಸಂಪರ್ಕ ರಸ್ತೆಗಳು ಹಲವು ವರ್ಷಗಳಿಂದ ಹಾಳಾಗಿದ್ದು, ದುರಸ್ತಿ ಕಾಮಗಾರಿ ನಡೆಯದ ಕಾರಣ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.
ಮಳೆಗಾಲದಲ್ಲಿ ರಸ್ತೆಗಳು ಕೆಸರುಗುಂಡಿಗಳಾಗಿ, ಬೇಸಿಗೆಯಲ್ಲಿ ಧೂಳುಮಯವಾಗಿ ಮಾರ್ಪಡುತ್ತಿವೆ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು, ಗರ್ಭಿಣಿಯರು ಹಾಗೂ ತುರ್ತು ಆರೋಗ್ಯ ಸೇವೆ ಪಡೆಯುವ ರೋಗಿಗಳು ನಿತ್ಯ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ರೈತರಿಗೆ ಹೆಚ್ಚುವರಿ ವೆಚ್ಚ ಹಾಗೂ ಸಮಯ ವ್ಯಯವಾಗುತ್ತಿದ್ದು, ಗ್ರಾಮೀಣ ಆರ್ಥಿಕ ಚಟುವಟಿಕೆಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಹಾಳಾಗಿರುವ ಗ್ರಾಮೀಣ ರಸ್ತೆಗಳ ಮರುನಿರ್ಮಾಣ, ಡಾಂಬರೀಕರಣ, ಅಗತ್ಯವಿರುವ ಕಡೆ ಸಿಸಿ ರಸ್ತೆ ನಿರ್ಮಾಣ ಹಾಗೂ ಗುಣಮಟ್ಟದ ರಸ್ತೆ ಕಾಮಗಾರಿಗಳಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕರು ಕೋರಿದ್ದಾರೆ.
ಮನವಿಯನ್ನು ಸ್ವೀಕರಿಸಿದ ಸಚಿವ ಈಶ್ವರ ಖಂಡ್ರೆ, ನಿಯಮಾನುಸಾರ ಪರಿಶೀಲಿಸಿ ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.



