ಮೈಸೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರೂ, ಅದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ಯಶಸ್ವಿಯಾಗಿ ನಡೆಸಿ ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಆದರೂ ಇದೇ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಇದು ಕಾಂಗ್ರೆಸ್ನ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ನೇಪಾಳದಲ್ಲಿ ನಡೆದ ಬೆಳವಣಿಗೆಗಳ ಮಾದರಿಯ ಪರಿಸ್ಥಿತಿಯನ್ನು ಭಾರತದಲ್ಲೂ ನಿರ್ಮಿಸಲು ಕೆಲವರು ಯತ್ನಿಸುತ್ತಿದ್ದಾರೆ. ಆದರೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು, ದೇಶದ ಜನತೆ ಇಂತಹ ಪ್ರಯತ್ನಗಳಿಗೆ ಮಣಿಯುವುದಿಲ್ಲ ಎಂದು ಹೇಳಿದರು.
ದೇಶದಲ್ಲಿ ಯಾವುದೇ ಅಸಮಾಧಾನವಿದ್ದರೂ ಜನರು ಚುನಾವಣೆಯ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಇತರ ದೇಶಗಳಂತೆಯೇ ಭಾರತದಲ್ಲೂ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.



