ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಕ್ರಮವನ್ನು ವಿರೋಧಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ ರಾಹುಲ್ ಗಾಂಧಿ,
ಅವರಿಗೆ ಬೇರೆ ಯಾವುದೇ ಸಚಿವಾಲಯದ ಜವಾಬ್ದಾರಿ ನೀಡಿದರೂ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು. ಜೊತೆಗೆ, ಪ್ರಧಾನಿ ಮೋದಿ ದೇಶದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ ಅವರು, ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ ಹಾಗೂ ಪೆಲೆಟ್ ಗನ್‌ಗಳನ್ನು ಬಳಸಲಾಗಿದೆ ಎಂದು ಹೇಳಿ, ಕೇಂದ್ರ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ ಎಂದು ಟೀಕಿಸಿದರು.
ಮೆಟ್ರೋ ರೈಲು ಸೇವೆ ಸ್ಥಗಿತಗೊಳಿಸುವುದು, ಇಂಟರ್ನೆಟ್ ಬಂದ್ ಮಾಡುವುದು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಆದರೆ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಗಂಭೀರ ವಿಷಯದಲ್ಲಿ ಸರ್ಕಾರ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.



