ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಬಳಿ ಎರಡು ಖಾಸಗಿ ಬಸ್‌ಗಳು ಹಾಗೂ ಒಂದು ಟೆಂಪೋ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದ 30ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ.
ಬಾಣಸಮುದ್ರ ಸಮೀಪದ ಗಾರ್ಮೆಂಟ್ಸ್‌ಗೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದ ವಾಹನಗಳ ನಡುವೆ ಈ ಅಪಘಾತ ನಡೆದಿದೆ. ಅಡ್ಡ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್ ಚಾಲಕ ಪ್ರಯತ್ನಿಸಿದ ವೇಳೆ ವಾಹನ ನಿಯಂತ್ರಣ ತಪ್ಪಿದ್ದು, ಮುಂದೆ ಸಾಗುತ್ತಿದ್ದ ಮತ್ತೊಂದು ಬಸ್ ಹಾಗೂ ಟೆಂಪೋಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ 17 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಆಸ್ಪತ್ರೆಯ ವೈದ್ಯರು ಹಾಗೂ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.



