ಶಿವಮೊಗ್ಗ: ಭಾರೀ ಗಾಳಿ-ಮಳೆಯ ವೇಳೆ ಮರ ಮುರಿದು ಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ನಡೆದಿದೆ.
ಹಿರೆಸಾನಿ ಗ್ರಾಮದ ಶೇಖರಪ್ಪ ಅವರ ಪುತ್ರಿ ನಿಖಿತಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಅವರು ಗರ್ತಿಕೆರೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶುಕ್ರವಾರ ಸಂಜೆ ತರಗತಿ ಮುಗಿಸಿಕೊಂಡು ಇಬ್ಬರು ಸ್ನೇಹಿತರೊಂದಿಗೆ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಮಾರ್ಗ ಮಧ್ಯೆ ಭಾರೀ ಗಾಳಿ ಹಾಗೂ ಮಳೆಯ ಪರಿಣಾಮ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿರುವುದನ್ನು ಗಮನಿಸಿದ ಮೂವರು ವಿದ್ಯಾರ್ಥಿಗಳು ಅಪಾಯ ತಪ್ಪಿಸಿಕೊಳ್ಳಲು ಹಿಂದಕ್ಕೆ ಸರಿದು ಓಡಲು ಮುಂದಾಗಿದ್ದಾರೆ. ಇದೇ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಉರುಳಿ ನಿಖಿತಾ ಅವರ ಮೇಲೆ ಬಿದ್ದಿದೆ.
ಘಟನೆಯಲ್ಲಿ ನಿಖಿತಾ ಅವರ ಎಡಗಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಸಂಪೂರ್ಣವಾಗಿ ಮುರಿದಿರುವುದಾಗಿ ತಿಳಿದುಬಂದಿದೆ. ತೀವ್ರ ನೋವಿನಿಂದ ವಿದ್ಯಾರ್ಥಿನಿ ಕೂಗಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣೆ ಮಾಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಗಾಯದ ತೀವ್ರತೆಯನ್ನು ಗಮನಿಸಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ. ವೈದ್ಯರ ಸಲಹೆಯಂತೆ ವಿದ್ಯಾರ್ಥಿನಿ ನಿಖಿತಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.



