ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದು, ಇದನ್ನು ಪ್ರಜಾಪ್ರಭುತ್ವದ ಗೆಲುವು ಎಂದು ಬಣ್ಣಿಸಿದ್ದಾರೆ. ಇದೇ ವೇಳೆ ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಶಾಶ್ವತ ತಡೆ ಹಾಕಲು ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎಕ್ಸ್ (X) ಖಾತೆಯಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಕೇಜ್ರಿವಾಲ್, ದೇಶದ ಯುವಕರು ಹಾಗೂ ಜೆನ್-ಝಿ ಪೀಳಿಗೆಯ ನಿರಂತರ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
“ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು. ಇದರಿಂದ ಸಂವಿಧಾನದ ಮೌಲ್ಯಗಳ ಮೇಲಿನ ಜನರ ನಂಬಿಕೆ ಮತ್ತಷ್ಟು ಬಲಗೊಳ್ಳಲಿದೆ. ಆದರೆ ಕೇವಲ ರಾಜೀನಾಮೆಯಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆಗಳಿಗೆ ಶಾಶ್ವತ ಕಡಿವಾಣ ಹಾಕಲು ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆಗಳನ್ನು ತರಬೇಕು” ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಯುವ ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸಿರುವ ಅವರು, “ನಿಮ್ಮ ನಿರಂತರ ಹೋರಾಟದಿಂದಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜನರಿಗೆ ಪ್ರಜಾಪ್ರಭುತ್ವದ ಮೇಲೆ ಮತ್ತೆ ವಿಶ್ವಾಸ ಮೂಡಬೇಕಾದರೆ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಬೇಕು” ಎಂದು ಹೇಳಿದ್ದಾರೆ.
ಇದೇ ವೇಳೆ ಎಎಪಿ ಹಿರಿಯ ನಾಯಕ ಗೋಪಾಲ್ ರೈ ಕೂಡ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಸ್ವಾಗತಿಸಿದ್ದು, ಬಿಹಾರ ಮತ್ತು ಗುಜರಾತ್‌ನಲ್ಲಿ ಪ್ರತಿಭಟನೆ ವೇಳೆ ಬಂಧಿಸಲ್ಪಟ್ಟ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಇತ್ತೀಚಿನ ಬೆಳವಣಿಗೆಗಳು ತಮಗೆ ನೋವು ತಂದಿವೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



