ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಎರಡು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 27 ಮತ್ತು 28ರಂದು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ:
ಜುಲೈ 27ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಜುಲೈ 28ರಂದು ಬೀದರ್, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೂ ಮಳೆ ಮುನ್ಸೂಚನೆ:
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಜುಲೈ 27ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ:
ಕಳೆದ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ತಲಾ 12 ಸೆಂ.ಮೀ. ಮಳೆಯಾಗಿದೆ.
ಇನ್ನು ಬೆಳ್ತಂಗಡಿಯಲ್ಲಿ 9 ಸೆಂ.ಮೀ., ಕಾರ್ಕಳದಲ್ಲಿ 8 ಸೆಂ.ಮೀ., ಧರ್ಮಸ್ಥಳ ಹಾಗೂ ಮಂಗಳೂರು ವೀಕ್ಷಣಾಲಯದಲ್ಲಿ ತಲಾ 7 ಸೆಂ.ಮೀ. ಮಳೆ ದಾಖಲಾಗಿದೆ.
ಗುಡುಗು, ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.



