ಮುಂಬೈ: ಮುಂಬೈನಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುಜರಾತ್ನ ರಾಜ್ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇಂಡಿಗೋ 6E 1452 ವಿಮಾನದಲ್ಲಿ ಒಟ್ಟು 194 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡಿರುವುದನ್ನು ಗಮನಿಸಿದ ಪೈಲಟ್ಗಳು ಕೂಡಲೇ ರಾಜ್ಕೋಟ್ ವಿಮಾನ ಸಂಚಾರ ನಿಯಂತ್ರಣ ಕೇಂದ್ರವನ್ನು ಸಂಪರ್ಕಿಸಿ ತುರ್ತು ಭೂಸ್ಪರ್ಶಕ್ಕೆ ಅನುಮತಿ ಕೋರಿದರು.
ಈ ಮಾಹಿತಿ ದೊರೆಯುತ್ತಿದ್ದಂತೆಯೇ ರಾಜ್ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಬಳಿಕ ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಯಿತು.
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಅಥವಾ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಳಿಕ ಸುರಕ್ಷತಾ ಸಿಬ್ಬಂದಿ ಹಾಗೂ ತಾಂತ್ರಿಕ ತಜ್ಞರು ವಿಮಾನವನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ತಾಂತ್ರಿಕ ತನಿಖೆ ನಡೆಯುತ್ತಿದೆ.
ದುಬೈಗೆ ತೆರಳಬೇಕಿದ್ದ ಪ್ರಯಾಣಿಕರಿಗೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ.



