HomeGadag Newsಗುಣಮಟ್ಟ ಇಲ್ಲದಿದ್ದರೆ ಬಿಲ್ ಇಲ್ಲ! ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ಗುಣಮಟ್ಟ ಇಲ್ಲದಿದ್ದರೆ ಬಿಲ್ ಇಲ್ಲ! ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡಾ ಇಲಾಖೆಯಡಿ ಕೈಗೊಳ್ಳಲಾಗುತ್ತಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ತೃಪ್ತಿಕರವಾಗಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಅನುದಾನವನ್ನು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡಿದೆ ಎಂಬ ಕಾರಣಕ್ಕೆ ಮಾತ್ರ ಪಾವತಿ ಮಾಡದೆ, ಗುಣಮಟ್ಟ, ನಿರ್ಮಾಣದ ಸ್ಥಿರತೆ ಹಾಗೂ ಸಾರ್ವಜನಿಕ ಬಳಕೆಗೆ ಯೋಗ್ಯವಾಗಿರುವುದನ್ನು ಪರಿಶೀಲಿಸಿದ ಬಳಿಕವೇ ಅಂತಿಮ ಪಾವತಿಗೆ ಅನುಮೋದನೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಕ್ರೀಡಾಂಗಣಗಳು ಕೇವಲ ಕ್ರೀಡಾ ಸ್ಪರ್ಧೆಗಳಿಗೆ ಸೀಮಿತವಾಗದೆ, ಪ್ರತಿನಿತ್ಯ ಸಾರ್ವಜನಿಕರ ವಾಯುವಿಹಾರ, ಯುವಕರ ದೈಹಿಕ ವ್ಯಾಯಾಮ ಹಾಗೂ ಕ್ರೀಡಾಪಟುಗಳ ತರಬೇತಿಗೆ ಪೂರಕವಾಗುವಂತೆ ಅಭಿವೃದ್ಧಿಪಡಿಸಬೇಕು. ಕ್ರೀಡಾಂಗಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ ಬೆಳಕಿನಂತಹ ಮೂಲಸೌಲಭ್ಯಗಳ ನಿರ್ವಹಣೆಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಮಕ್ಕಳಿಗೂ ಸರ್ಕಾರದ ಕ್ರೀಡಾ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ಉತ್ತಮ ಮೂಲಸೌಕರ್ಯ ಹಾಗೂ ತರಬೇತಿಯ ಮೂಲಕ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕ್ರೀಡಾಂಗಣಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಬಾಕಿ ಉಳಿದಿರುವ ಕಾಮಗಾರಿಗಳು, ನಿರ್ವಹಣಾ ಸ್ಥಿತಿ ಹಾಗೂ ಲಭ್ಯವಿರುವ ಸೌಲಭ್ಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ತಾಲೂಕು ಮಟ್ಟದ ಕ್ರೀಡಾಂಗಣಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಆಯಾ ತಾಲೂಕುಗಳ ಕ್ರೀಡಾಂಗಣಗಳ ಉಸ್ತುವಾರಿಯನ್ನು ಸಂಬಂಧಿತ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳಿಗೆ ವಹಿಸಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಸಭೆಯ ಆರಂಭದಲ್ಲಿ ವಿಷಯವಾರು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಎಸ್.ಎಸ್. ಕಲ್ಮನಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ, ಸಿಪಿಐ ಎಲ್.ಕೆ. ಜೂಲಕಟ್ಟಿ, ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಕಾಮಗಾರಿ ಪೂರ್ಣಗೊಂಡಿದೆ ಎಂಬ ಕಾರಣಕ್ಕೆ ಬಿಲ್ ಬಿಡುಗಡೆ ಮಾಡಬೇಡಿ, ಅಧಿಕಾರಿಗಳು ಖುದ್ದು ಪರಿಶೀಲಿಸಿದ ಬಳಿಕವೇ ಪಾವತಿಗೆ ಅನುಮೋದನೆ ನೀಡಿ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img