ವಿಜಯಸಾಕ್ಷಿ ಸುದ್ದಿ, ಗದಗ: ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರಹಬ್ಬದ ಘನತೆಗೆ ತಕ್ಕಂತೆ ಶಿಷ್ಠಾಚಾರ ಪಾಲನೆಯೊಂದಿಗೆ ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಸಂಕೇತವಾಗಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಹ್ವಾನ ಪತ್ರಿಕೆಗಳ ಮುದ್ರಣ, ಅತಿಥಿಗಳ ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ ಸೇರಿದಂತೆ ಎಲ್ಲ ವ್ಯವಸ್ಥೆಗಳು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದು ಸೂಚಿಸಿದರು.
ರಾಜ್ಯ ಸರ್ಕಾರದ ಶಿಷ್ಟಾಚಾರ ನಿಯಮಾವಳಿಯಂತೆ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರು, ಹಿರಿಯ ನಾಗರಿಕರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ಆಹ್ವಾನ ನೀಡಬೇಕು. ಯಾವುದೇ ಅರ್ಹ ವ್ಯಕ್ತಿ ಆಹ್ವಾನದಿಂದ ವಂಚಿತರಾಗದಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಧ್ವಜಾರೋಹಣ, ಗೌರವ ವಂದನೆ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ನೆರವು, ಅಗ್ನಿಶಾಮಕ ವ್ಯವಸ್ಥೆ, ತುರ್ತು ನಿರ್ಗಮನ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಸೌಲಭ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದರು.
ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಚೇರಿಗಳು ಹಾಗೂ ರಾಷ್ಟ್ರ ನಾಯಕರ ಪ್ರತಿಮೆಗಳಿರುವ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಿ, ರಸ್ತೆಗಳನ್ನು ಅಲಂಕರಿಸುವ ಮೂಲಕ ರಾಷ್ಟ್ರಹಬ್ಬಕ್ಕೆ ತಕ್ಕ ವಾತಾವರಣ ನಿರ್ಮಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಪೊಲೀಸ್ ಹಾಗೂ ಇತರೆ ತಂಡಗಳ ಪಥಸಂಚಲನದ ಪೂರ್ವಾಭ್ಯಾಸವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಬೇಕು. ಸಂಜೆ ವೇಳೆ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ಕನ್ನಡದ ಸಾಂಸ್ಕೃತಿಕ ವೈಭವ ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ವೇಳೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಪರ್ಯಾಯ ವಿದ್ಯುತ್ ವ್ಯವಸ್ಥೆ, ಜನರೇಟರ್, ಧ್ವನಿವರ್ಧಕ ಹಾಗೂ ಬೆಳಕಿನ ವ್ಯವಸ್ಥೆಯನ್ನು ಮುಂಚಿತವಾಗಿ ಪರಿಶೀಲಿಸಿ ಸಿದ್ಧವಾಗಿರಿಸಬೇಕು ಎಂದು ಸೂಚಿಸಿದರು.
ಪೊಲೀಸ್ ಇಲಾಖೆ ಭದ್ರತೆ ಹಾಗೂ ಸಂಚಾರ ನಿಯಂತ್ರಣ, ಆರೋಗ್ಯ ಇಲಾಖೆ ವೈದ್ಯಕೀಯ ತಂಡ ಮತ್ತು ಆಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ರಾಷ್ಟ್ರೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿವೈಎಸ್‌ಪಿ ವಿದ್ಯಾನಂದ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
“ರಾಷ್ಟ್ರಹಬ್ಬದ ಗೌರವಕ್ಕೆ ಧಕ್ಕೆಯಾಗದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಶಿಷ್ಟಾಚಾರ ಹಾಗೂ ಶಿಸ್ತುಬದ್ಧವಾಗಿ ಪೂರ್ಣಗೊಳಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ



