ನೆಲಮಂಗಲ: ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಲಿಖಿತಾ (10) ಎಂದು ಗುರುತಿಸಲಾಗಿದೆ. ಲಿಖಿತಾ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಮಾಹಿತಿಯ ಪ್ರಕಾರ, ಬೆಳಗ್ಗೆ ತಾಯಿ ಕೆಲಸಕ್ಕೆ ತೆರಳಿದ ಬಳಿಕ ಲಿಖಿತಾ ತನ್ನ ದೊಡ್ಡಮ್ಮನೊಂದಿಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನೆಲಮಂಗಲದಿಂದ ಕುಣಿಗಲ್ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಲಿಖಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ದೊಡ್ಡಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದೇ ಬೀರವಾರ ಗ್ರಾಮದ ಸಮೀಪ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ಈ ಭಾಗದಲ್ಲಿ ತಕ್ಷಣ ಸ್ಕೈವಾಕ್ ಅಥವಾ ಸುರಕ್ಷಿತ ಪಾದಚಾರಿ ದಾಟುವ ವ್ಯವಸ್ಥೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.



