
ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ತೀರ್ಪು ಪ್ರಕಟಿಸಿದ್ದಾರೆ.
ಕೊಪ್ಪಳದ ಬಸವರಾಜ ಸತ್ಯಪ್ಪ ದೊಡ್ಡಮನಿ ಎಂಬ ವ್ಯಕ್ತಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿ, ಬೇರೆ ಊರಿಗೆ ಕರೆದೊಯ್ದು ಗೃಹ ಬಂಧನದಲ್ಲಿಟ್ಟು ಅತ್ಯಾಚಾರ ಮಾಡಿದ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಠಾಣೆ ಪಿ.ಐ ಮೌನೇಶ್ವರ ಮಾಲಿಪಾಟೀಲ್ ಅವರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.
ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.20 ಸಾವಿರಗಳ ದಂಡವನ್ನು ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ ರೂ.10 ಸಾವಿರಗಳನ್ನು ಬಾಧಿತಳಿಗೆ ಪರಿಹಾರ ರೂಪದಲ್ಲಿ ವಿತರಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.