ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿನ್ನೆ ಬೆಳಗಿನ ಉಪಹಾರ ಸೇವಿಸಿದ ಬಳಿಕ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಹೊಟ್ಟೆನೋವು, ವಾಂತಿ, ತಲೆಸುತ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಹುತೇಕ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ.
ಶಾಲೆಯಲ್ಲಿ ಬೆಳಗಿನ ಉಪಹಾರಕ್ಕೆ ಅವಲಕ್ಕಿ ತಯಾರಿಸಲಾಗಿತ್ತು. ಉಪಹಾರದಿಂದ ದುರ್ವಾಸನೆ ಬರುತ್ತಿದೆ ಎಂದು ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿಗೆ ತಿಳಿಸಿ, ಬೇರೆ ಆಹಾರ ನೀಡುವಂತೆ ಮನವಿ ಮಾಡಿದ್ದರು. ಆದರೆ, ಸಿಬ್ಬಂದಿ ಮನವಿಯನ್ನು ನಿರಾಕರಿಸಿದ್ದರಿಂದ ವಿದ್ಯಾರ್ಥಿಗಳು ಅನಿವಾರ್ಯವಾಗಿ ಅದೇ ಉಪಹಾರ ಸೇವಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ವಸತಿ ಶಾಲೆಯ ವಿದ್ಯಾರ್ಥಿಗಳು ಅಫಜಲಪುರ ಸರ್ಕಾರಿ ಆಸ್ಪತ್ರೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಂ.ವೈ. ಪಾಟೀಲ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮಕ್ಕಳ ಜೀವದೊಂದಿಗೆ ನಿರ್ಲಕ್ಷ್ಯ ತೋರಿದ ವಾರ್ಡನ್, ಮುಖ್ಯ ಶಿಕ್ಷಕ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಸೂಚನೆ ನೀಡಿದರು.
ಪಲಾವ್ ತಿಂದು 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ:
ಇನ್ನು ನಿನ್ನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲೂ ಹುಳ ಬಿದ್ದಿದ್ದ ಪಲಾವ್ ಸೇವಿಸಿದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಾಂತಿ, ಭೇದಿ, ತಲೆನೋವು ಹಾಗೂ ತಲೆಸುತ್ತಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಹಾರದಲ್ಲಿ ಹುಳಗಳು ಪತ್ತೆಯಾಗಿರುವ ಹಿನ್ನೆಲೆ ವಾರ್ಡನ್ ವಿರುದ್ಧ ಪೋಷಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.



