ಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ಭಾರಿ ದುರಂತ ಸಂಭವಿಸಿದ್ದು, ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಎನ್ಡಿಆರ್ಎಫ್ ತಂಡ, ಭಿವಂಡಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆಯಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 8 ರಿಂದ 10 ಮಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಟ್ಟಡ ಕುಸಿತದಿಂದ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗದಂತೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಸಾವುನೋವುಗಳ ಕುರಿತು ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



