HomeKarnataka Newsಆರೋಪಿಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬೇಡಿ ಎಂಬ ನಿರ್ದೇಶನ ತನಿಖೆಗೆ ಅಡ್ಡಿಯಲ್ಲ; ಹೈಕೋರ್ಟ್

ಆರೋಪಿಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬೇಡಿ ಎಂಬ ನಿರ್ದೇಶನ ತನಿಖೆಗೆ ಅಡ್ಡಿಯಲ್ಲ; ಹೈಕೋರ್ಟ್

For Dai;y Updates Join Our whatsapp Group

ಬೆಂಗಳೂರು: ಆರೋಪಿಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ನೀಡುವ ಆದೇಶವು ಬಂಧನ ಸೇರಿದಂತೆ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರ ರಕ್ಷಿಸುತ್ತದೆ. ಆದರೆ, ತನಿಖಾ ಸಂಸ್ಥೆಯು ತನಿಖೆ ಮುಂದುವರಿಸುವುದು ಅಥವಾ ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳುವುದನ್ನು ಅದು ತಡೆಯುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಸ್ಪಷ್ಟನೆ ನೀಡಿದೆ.

ಹಣ ದುರ್ಬಳಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಕ್ರಮವನ್ನು ಪ್ರಶ್ನಿಸಿ ತಮಿಳುನಾಡು ಮೂಲದ ಕಂಪನಿಯ ನಿರ್ದೇಶಕಿ ಪವಿತ್ರ ರಾಮಾನುಜಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ವೇಳೆ, ಈ ಹಿಂದೆ ಅರ್ಜಿದಾರರು ತನಿಖೆಗೆ ಸಹಕರಿಸುವುದಾಗಿ ಮುಚ್ಚಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಆದರೂ ಇಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಕಾನೂನುಬಾಹಿರ ಎಂದು ಅರ್ಜಿದಾರರು ವಾದಿಸಿದ್ದರು.

ಆದರೆ, ಈ ವಾದವನ್ನು ತಳ್ಳಿಹಾಕಿದ ಹೈಕೋರ್ಟ್, ‘ಬಲವಂತದ ಕ್ರಮ ಕೈಗೊಳ್ಳಬಾರದು’ ಎಂಬ ಆದೇಶವು ತನಿಖಾ ಸಂಸ್ಥೆಯ ಅಧಿಕಾರವನ್ನು ನಿರ್ಬಂಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ನ್ಯಾಯಾಲಯದ ಪ್ರಕಾರ, ಇಂತಹ ಆದೇಶವು ತನಿಖೆ ಎದುರಿಸುತ್ತಿರುವ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು ನೀಡುವ ನ್ಯಾಯಾಂಗ ರಕ್ಷಣೆಯಾಗಿದೆ. ಇದು ಬಂಧನ ಅಥವಾ ವ್ಯಕ್ತಿಯ ಸ್ವಾತಂತ್ರ್ಯದ ಮೇಲೆ ನೇರ ಪರಿಣಾಮ ಬೀರುವ ಕ್ರಮಗಳನ್ನು ಮಾತ್ರ ನಿರ್ಬಂಧಿಸುತ್ತದೆ. ಆದರೆ, ತನಿಖೆಯನ್ನು ಮುಂದುವರಿಸುವುದು, ಸಾಕ್ಷ್ಯ ಸಂಗ್ರಹಿಸುವುದು, ಪ್ರಾಸಿಕ್ಯೂಷನ್ ದೂರು ಸಲ್ಲಿಸುವುದು ಅಥವಾ ಕಾನೂನುಬದ್ಧವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತಹ ಕ್ರಮಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ

ಹಣ ದುರ್ಬಳಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಪವಿತ್ರ ರಾಮಾನುಜಂ ಅವರನ್ನು ಆರೋಪಿಯನ್ನಾಗಿ ಸೇರಿಸಿದ್ದು, ಸುಮಾರು ₹7.9 ಕೋಟಿ ಹಣ ದುರ್ಬಳಕೆ ನಡೆಸಿರುವ ಆರೋಪದಡಿ ಇಸಿಐಆರ್ (ECIR) ದಾಖಲಿಸಿತ್ತು. ತನಿಖೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ತನಿಖೆಗೆ ಸಂಪೂರ್ಣ ಸಹಕರಿಸುವುದಾಗಿ ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಮಧ್ಯಂತರ ಆದೇಶ ನೀಡಲಾಗಿತ್ತು. ಆದರೆ, ಬಳಿಕ ಇಡಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದರಿಂದ, ಅದನ್ನು ಪ್ರಶ್ನಿಸಿ ಅವರು ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇಡಿ ಕೈಗೊಂಡ ಆಸ್ತಿ ಮುಟ್ಟುಗೋಲು ಕ್ರಮವು ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img