ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡುವುದರ ಜೊತೆಗೆ, ಕೆಳಹಂತದ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ. ಬಸವರಾಜ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ವಿನಯ್ ಕುಲಕರ್ಣಿ ಅವರಿಗೆ 5 ಲಕ್ಷ ರೂಪಾಯಿ ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ನ್ಯಾಯಾಲಯ ಸೂಚಿಸಿದೆ.
ವಿನಯ್ ಕುಲಕರ್ಣಿ ಪರ ವಕೀಲ ಸುನೀಲ್ ಮಾತನಾಡಿ, ಇದು ಕಾನೂನು ಹೋರಾಟದ ಒಂದು ಮಧ್ಯಂತರ ಜಯ ಎಂದು ಹೇಳಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೂ ವಿನಯ್ ಕುಲಕರ್ಣಿಗೂ ಯಾವುದೇ ಸಂಬಂಧವಿಲ್ಲ. ಸಿಬಿಐ ತನಿಖೆಯ ಬಳಿಕ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬುದು ತಮ್ಮ ಪ್ರಮುಖ ವಾದವಾಗಿತ್ತು ಎಂದು ತಿಳಿಸಿದ್ದಾರೆ.
ಸೆಷನ್ಸ್ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಶಿಕ್ಷೆ ವಿಧಿಸುವಾಗ ಅಪ್ರೂವರ್ ಸಾಕ್ಷಿಯ ಮೇಲೆ ಹೆಚ್ಚು ಅವಲಂಬಿತವಾಗಿತ್ತು. ಅಲ್ಲದೇ, ಸಾಕ್ಷ್ಯಾಧಾರಗಳನ್ನು ಸಮರ್ಪಕವಾಗಿ ಪರಿಶೀಲಿಸದೆ ಕೇವಲ ಸಿಬಿಐ ಚಾರ್ಜ್‌ಶೀಟ್ ಆಧರಿಸಿ ತೀರ್ಪು ನೀಡಲಾಗಿದೆ ಎಂದು ವಕೀಲರು ವಾದಿಸಿದ್ದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ಹೈಕೋರ್ಟ್, ವಿನಯ್ ಕುಲಕರ್ಣಿ ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿದ್ದು, ಚನ್ನಕೇಶವ ಟಿಂಗರಿಕರ್ ಸೇರಿದಂತೆ ಕೆಲ ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ಎಲ್ಲ ಆರೋಪಿಗಳಿಗೂ ಇನ್ನೂ ಜಾಮೀನು ಮಂಜೂರಾಗಿಲ್ಲ ಎಂದು ವಕೀಲರು ಸ್ಪಷ್ಟಪಡಿಸಿದ್ದಾರೆ.
ಇನ್ನು ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಸಂಬಂಧಿಸಿದಂತೆ, ಈ ಹಿಂದೆ ಸ್ಪೀಕರ್ ಆದೇಶದಲ್ಲಿ ಹೈಕೋರ್ಟ್‌ನ ಅಂತಿಮ ತೀರ್ಪಿನ ಮೇಲೆ ಅನರ್ಹತೆ ನಿರ್ಧಾರವಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿರುವ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.
ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ ಅಗತ್ಯ ಶ್ಯೂರಿಟಿ ಸಲ್ಲಿಸಿದ ಬಳಿಕ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.



