HomeGadag Newsಪರೀಕ್ಷಾ ಅಕ್ರಮ ತಡೆ ಕಾಯ್ದೆ ಯುವಶಕ್ತಿಯ ಗೆಲುವು

ಪರೀಕ್ಷಾ ಅಕ್ರಮ ತಡೆ ಕಾಯ್ದೆ ಯುವಶಕ್ತಿಯ ಗೆಲುವು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಸ್ಪರ್ಧಾತ್ಮಕ ಪರೀಕ್ಷೆಗಳ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪರೀಕ್ಷಾ ಅಕ್ರಮ ತಡೆ ಕಾಯ್ದೆ ಯುವಶಕ್ತಿಯ ಗೆಲುವಾಗಿದ್ದು, ಈ ಕುರಿತು ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಡಿಸಿದ ವಾದಗಳು ಕಾಂಗ್ರೆಸ್‌ನ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿವೆ ಎಂದು ಬಿಜೆಪಿ ಮುಖಂಡ ಸಂತೋಷ ಅಕ್ಕಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾಮಾನ್ಯ ಕುಟುಂಬದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಸಮಾನ ಅವಕಾಶದ ವೇದಿಕೆಯಾಗಿದ್ದು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾಡುವ ಗಂಭೀರ ದ್ರೋಹವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯವನ್ನು ಉಲ್ಲೇಖಿಸಿದರು.

ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಆತಂಕವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಹೇಳಿಕೆಗಳಲ್ಲಿ ವಾಸ್ತವಾಂಶಗಳ ಕೊರತೆ ಇತ್ತು ಎಂದು ಟೀಕಿಸಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 2010ರಲ್ಲೇ ಇಂತಹ ಮಸೂದೆ ತರಲು ಮುಂದಾಗಿದ್ದರೂ ಅದನ್ನು ಜಾರಿಗೊಳಿಸದ ಕಾರಣ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ತೇಜಸ್ವಿ ಸೂರ್ಯ ಸಂಸತ್ತಿನಲ್ಲಿ ವಿವರಿಸಿರುವುದಾಗಿ ಸಂತೋಷ ಅಕ್ಕಿ ತಿಳಿಸಿದ್ದಾರೆ.

ಹೊಸ ಕಾಯ್ದೆಯಡಿ ಪರೀಕ್ಷಾ ಅಕ್ರಮ ಎಸಗುವವರಿಗೆ 5ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಲಕ್ಷ ರೂಪಾಯಿವರೆಗೆ ದಂಡ, ಸಂಘಟಿತ ಅಕ್ರಮ ಜಾಲಗಳಿಗೆ 7ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು 10 ಕೋಟಿ ರೂಪಾಯಿವರೆಗೆ ದಂಡ ಸೇರಿದಂತೆ ಕಠಿಣ ಶಿಕ್ಷೆಗಳ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಅಕ್ರಮದಲ್ಲಿ ಭಾಗಿಯಾದ ಸಂಸ್ಥೆಗಳ ವಿರುದ್ಧವೂ ಕಠಿಣ ಕ್ರಮ, ಆಸ್ತಿ ಮುಟ್ಟುಗೋಲು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಹಾಗೂ ನಿಗದಿತ ಅವಧಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸುವಂತಹ ಕಟ್ಟುನಿಟ್ಟಿನ ವ್ಯವಸ್ಥೆ ಈ ಕಾಯ್ದೆಯಲ್ಲಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಪರೀಕ್ಷಾ ಅಕ್ರಮ ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ ನಡೆದಿರುವ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಯುವಜನತೆಗೆ ರಾಜಕೀಯ ಘೋಷಣೆಗಳಿಗಿಂತ ಪಾರದರ್ಶಕ ಪರೀಕ್ಷಾ ವ್ಯವಸ್ಥೆ, ತ್ವರಿತ ತನಿಖೆ ಮತ್ತು ತಾಂತ್ರಿಕ ಸುಧಾರಣೆಗಳ ಅಗತ್ಯವಿದ್ದು, ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ಸಂತೋಷ ಅಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img