ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರದ ನಡುವೆ ಭೂಕುಸಿತದ ಘಟನೆಗಳು ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಕರೀಕೆ ಗ್ರಾಮದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಭೂಕುಸಿತದಿಂದ ಗ್ರಾಮದ ಪ್ರಮುಖ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ.
ಕರೀಕೆ ಗ್ರಾಮದ ಚೆತ್ತುಕಾಯ–ಪಚ್ಚೆಪಿಲಾವು ಪರಿಶಿಷ್ಟ ಪಂಗಡ ಕಾಲೋನಿ ರಸ್ತೆಯಲ್ಲಿ ಈ ಭೂಕುಸಿತ ಸಂಭವಿಸಿದೆ. ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಮತ್ತು ಬಂಡೆಗಳು ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ.
ಗ್ರಾಮದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಮಣ್ಣು ತೆರವು ಹಾಗೂ ರಸ್ತೆ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಸ್ಥಳಕ್ಕೆ ಜೆಸಿಬಿ ಯಂತ್ರಗಳನ್ನು ತರಿಸಲಾಗಿದ್ದು, ರಸ್ತೆ ಮೇಲಿನ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.
ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.



