HomeKarnataka Newsಹಗರಿಬೊಮ್ಮನಹಳ್ಳಿ ಪೊಲೀಸ್ ಕಸ್ಟಡಿಯಲ್ಲಿ ಕಾರ್ಮಿಕ ಅನುಮಾನಾಸ್ಪದ ಸಾವು!

ಹಗರಿಬೊಮ್ಮನಹಳ್ಳಿ ಪೊಲೀಸ್ ಕಸ್ಟಡಿಯಲ್ಲಿ ಕಾರ್ಮಿಕ ಅನುಮಾನಾಸ್ಪದ ಸಾವು!

For Dai;y Updates Join Our whatsapp Group

ಬಳ್ಳಾರಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೃತರನ್ನು ಹರಪನಹಳ್ಳಿ ಮೂಲದ 38 ವರ್ಷದ ಕಟ್ಟಡ ಕಾರ್ಮಿಕ ಖಲೀಲ್ ಎಂದು ಗುರುತಿಸಲಾಗಿದೆ.

ಕುಟುಂಬದ ಮಾಹಿತಿ ಪ್ರಕಾರ, ಪತ್ನಿಯೊಂದಿಗೆ ನಡೆದಿದ್ದ ಸಣ್ಣ ಜಗಳಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಉದ್ದೇಶದಿಂದ ಪೊಲೀಸರು ಶನಿವಾರ (ಆಗಸ್ಟ್ 1) ರಾತ್ರಿ ಖಲೀಲ್ ಅವರನ್ನು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ಕರೆತಂದಿದ್ದರು. ಆದರೆ ಕಸ್ಟಡಿಯಲ್ಲಿದ್ದಾಗಲೇ ಮೃತಪಟ್ಟಿದ್ದಾರೆ.

ಖಲೀಲ್ ಅವರ ಬೆನ್ನು ಹಾಗೂ ತಲೆ ಭಾಗದಲ್ಲಿ ಗಾಯಗಳಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ವಿಚಾರಣೆ ನೆಪದಲ್ಲಿ ಪೊಲೀಸರು ಹಲ್ಲೆ ನಡೆಸಿದ್ದರಿಂದಲೇ ಸಾವು ಸಂಭವಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮೃತದೇಹದ ಮೇಲಿರುವ ಗಾಯದ ಗುರುತುಗಳು ಹಲವು ಅನುಮಾನಗಳಿಗೆ ಕಾರಣವಾಗಿವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇತ್ತ, ಖಲೀಲ್ ಅವರಿಗೆ ದಿಢೀರ್ ಮೂರ್ಛೆ (ಫಿಟ್ಸ್) ಬಂದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಆದರೆ ಫಿಟ್ಸ್‌ನಿಂದ ಮೃತಪಟ್ಟಿದ್ದರೆ ದೇಹದ ಮೇಲೆ ಕಂಡುಬಂದಿರುವ ಗಂಭೀರ ಗಾಯಗಳು ಹೇಗೆ ಉಂಟಾದವು ಎಂಬ ಪ್ರಶ್ನೆಯನ್ನು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಎತ್ತಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ಎದುರು ಮೃತರ ಸಂಬಂಧಿಕರು ಹಾಗೂ ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಿದರು. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಘಟನೆಯ ಗಂಭೀರತೆಯನ್ನು ಗಮನಿಸಿ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ತನಿಖೆಯಲ್ಲಿ ಪೊಲೀಸ್ ಸಿಬ್ಬಂದಿಯ ನಿರ್ಲಕ್ಷ್ಯ ಅಥವಾ ತಪ್ಪು ಸಾಬೀತಾದರೆ, ಅವರ ವಿರುದ್ಧ ಯಾವುದೇ ದಾಕ್ಷಿಣ್ಯವಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img