ಧಾರವಾಡ: ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಬಸ್ನ ಮುಂಭಾಗದ ಟೈರ್ ಏಕಾಏಕಿ ಬಸ್ಟ್ ಆಗಿದ್ದು, ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಬಸ್ ಪಲ್ಟಿಯಾದ ತಕ್ಷಣ ಸ್ಥಳೀಯರು ಹಾಗೂ ಸಹ ಪ್ರಯಾಣಿಕರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಗದಗ ಜಿಲ್ಲೆಯ ನರಗುಂದ ಸರ್ಕಾರಿ ಆಸ್ಪತ್ರೆಗೆ ಹಾಗೂ ಇನ್ನು ಕೆಲವರನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ಪಡೆದ ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



