ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಕುತೂಹಲ ಕೆರಳಿಸುವ ಬೆಳವಣಿಗೆ ನಡೆದಿದ್ದು, ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಅವರು ನಿರ್ಧರಿಸಿದ್ದು, ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ.
ಮಾಹಿತಿಯ ಪ್ರಕಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನದ ಆರಂಭದಲ್ಲೇ ತಮ್ಮ ಆಪ್ತರಿಗೆ ತಾವು ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದರು. ಬಳಿಕ ಅವರು ತಮ್ಮ ಅಧಿಕೃತ ಕಾವೇರಿ ನಿವಾಸದಲ್ಲೇ ಉಳಿದಿದ್ದರು ಎಂದು ತಿಳಿದುಬಂದಿದೆ.
ಸಚಿವ ಸಂಪುಟ ವಿಸ್ತರಣೆ ಹಾಗೂ ಹೊಸ ಸಚಿವರ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಈ ನಡೆ ಮತ್ತಷ್ಟು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಸಿಎಂ ಕಾರ್ಯಕ್ರಮಕ್ಕೆ ಗೈರಾಗಿರುವುದು ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಇತ್ತ ಸೋಮವಾರ ಸಂಜೆ ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 19 ಮಂದಿ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



