ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಯಾವುದೇ ಲೋಪವಿಲ್ಲದೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಬಾಕಿ ಅರ್ಜಿಗಳ ವಿಲೇವಾರಿ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯ ವೇಳೆ ಲಕ್ಷ್ಮವ್ವ ಬಾಲೇಹೊಸೂರ ಎಂಬ ಮಹಿಳೆ ತನ್ನ ಮಕ್ಕಳೊಂದಿಗೆ ಆಗಮಿಸಿ, ಕಳೆದ ಮೂರು ವರ್ಷಗಳಿಂದ ಪಡಿತರ ಚೀಟಿಗಾಗಿ ಅಲೆದಾಡುತ್ತಿದ್ದರೂ ಇನ್ನೂ ಸೌಲಭ್ಯ ದೊರೆತಿಲ್ಲ ಎಂದು ಅಳಲು ತೋಡಿಕೊಂಡರು. ಈ ಕುರಿತು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಹೆಸ್ಕಾಂ ಎಇಇ ಆಂಜನಪ್ಪ ಬಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೃತ್ಯುಂಜಯ ಗುಡ್ಡದನ್ವೇರಿ, ಕೆಎಸ್ಆರ್ಟಿಸಿ ಅಧಿಕಾರಿ ಪವಿತ್ರಾ ಪಿ., ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ತಾಪಂ ಇಒ ಮಂಜುಳಾ ಹಕಾರಿ ಉಪಸ್ಥಿತರಿದ್ದರು.



