ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಗೊಲ್ಲ (ಯಾದವ) ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿರುವ ಗದಗ ಜಿಲ್ಲಾ ಗೊಲ್ಲ (ಯಾದವ) ಸಂಘ, ಶಾಸಕ ಡಿ.ಟಿ. ಶ್ರೀನಿವಾಸ್ ಹಾಗೂ ಶಾಸಕ ಎಂ. ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಗದಗ ಜಿಲ್ಲಾ ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ಕಾರ್ಯಕಾರಿಣಿ ಸದಸ್ಯ ಹರೀಶ ಪೂಜಾರ, ದಿವಂಗತ ಎ. ಕೃಷ್ಣಪ್ಪ ಹಾಗೂ ಮುನಿಯಪ್ಪ ಮುದ್ದಪ್ಪ ಅವರ ನಂತರ ಯಾವುದೇ ಸರ್ಕಾರದಲ್ಲಿ ಗೊಲ್ಲ ಸಮುದಾಯಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಇದು ಸಮುದಾಯದ ನಿರ್ಲಕ್ಷ್ಯದ ಸಂಕೇತವಾಗಿದ್ದು, ತಕ್ಷಣವೇ ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗೊಲ್ಲ (ಯಾದವ) ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಮಧ್ಯಪ್ರವೇಶಿಸಿ, ಡಿ.ಟಿ. ಶ್ರೀನಿವಾಸ್ ಹಾಗೂ ಎಂ. ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

