ಬೆಂಗಳೂರು: ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಕೆ.ಆರ್. ಮಾರ್ಕೆಟ್ನಲ್ಲಿ ವಾಹನ ಸವಾರರಿಗೆ ತಾತ್ಕಾಲಿಕ ಸಂಕಷ್ಟ ಎದುರಾಗಿದೆ.
ಕೆ.ಆರ್. ಮಾರ್ಕೆಟ್ ಮೇಲ್ಸೇತುವೆಯ ಚಾಮರಾಜಪೇಟೆ ತಿರುವಿನ ರಸ್ತೆ ಮುಂದಿನ ಮೂರು ತಿಂಗಳ ಕಾಲ ಬಂದ್ ಆಗಲಿದೆ.
ಸುಲ್ತಾನ್ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೇಲ್ಸೇತುವೆ ಮೂಲಕ ಪ್ರತಿದಿನ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆ, ಚಾಮರಾಜಪೇಟೆ, ಬಸವನಗುಡಿ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಿಗೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು.
ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂದಿನ ಕೆಲವು ತಿಂಗಳು ಈ ಭಾಗದಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.
ಕೆ.ಆರ್. ಮಾರ್ಕೆಟ್ನಲ್ಲಿ ತೆರವು ಕಾರ್ಯಾಚರಣೆ:
ಇದರ ನಡುವೆ ಕೆ.ಆರ್. ಮಾರ್ಕೆಟ್ನಲ್ಲಿ ಬೃಹತ್ ತೆರವು ಕಾರ್ಯಾಚರಣೆಯೂ ಆರಂಭವಾಗಿದೆ.
ಜಿಬಿಎ (GBA) ಅಧಿಕಾರಿಗಳು ಮೇಲ್ಸೇತುವೆಯ ಕೆಳಭಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.
ಮೂರು ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸುಮಾರು 20 ರಿಂದ 25 ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ.
ತೆರವು ಕಾರ್ಯಾಚರಣೆಗೆ ಕೆಲ ಅಂಗಡಿ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದರೆ, ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ರಸ್ತೆ ಬಂದ್ ಮತ್ತು ತೆರವು ಕಾರ್ಯಾಚರಣೆ ಒಂದೇ ಸಮಯದಲ್ಲಿ ನಡೆಯುತ್ತಿರುವುದರಿಂದ ಕೆ.ಆರ್. ಮಾರ್ಕೆಟ್ ಸುತ್ತಮುತ್ತ ವಾಹನ ದಟ್ಟಣೆ ಹೆಚ್ಚಾಗಿದೆ. ಈ ಭಾಗದಲ್ಲಿ ಸಂಚರಿಸುವವರು ಸಾಧ್ಯವಾದಷ್ಟು ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.



