ವಿಜಯಸಾಕ್ಷಿ ಸುದ್ದಿ, ಧಾರವಾಡ: ಮುಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಂಪುಟ ದರ್ಜೆ ಸಚಿವ ಸಂತೋಷ್ ಎಸ್. ಲಾಡ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಈಗಾಗಲೇ ಭೇಟಿ ನೀಡಿದ್ದು, ಗುರುವಾರ ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ, ಆಗಸ್ಟ್ 7ರಂದು ಅಳ್ನಾವರ ತಾಲೂಕಿನ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಬೆಳೆ ಸಮೀಕ್ಷೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಿ, ರೈತರಿಗೆ ಸರ್ಕಾರದ ಯೋಜನೆಗಳ ಲಾಭ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾಹಿತಿ ನೀಡಿ, ಜೂನ್ 1ರಿಂದ ಆಗಸ್ಟ್ 5ರವರೆಗೆ ಜಿಲ್ಲೆಯಲ್ಲಿ ವಾಡಿಕೆಯ 299.7 ಮಿ.ಮೀ. ಮಳೆಯ ಬದಲಿಗೆ 196.2 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇ.35ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದರು.
ಜಿಲ್ಲೆಯಲ್ಲಿ ಕೃಷಿ ಬೆಳೆಗಳ 2.71 ಲಕ್ಷ ಹೆಕ್ಟೇರ್ (ಶೇ.96) ಹಾಗೂ ತೋಟಗಾರಿಕೆ ಬೆಳೆಗಳ 16,825 ಹೆಕ್ಟೇರ್ (ಶೇ.74) ಪ್ರದೇಶದಲ್ಲಿ ಬಿತ್ತನೆಯಾಗಿದೆ. ರೈತರಿಗೆ ಅಗತ್ಯ ಪ್ರಮಾಣದ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ಯಾವುದೇ ಕೊರತೆ ಇಲ್ಲ ಎಂದು ವಿವರಿಸಿದರು.
ಪ್ರಸ್ತುತ 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 18 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಾನುವಾರುಗಳಿಗೆ 43 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದ್ದು, ಮುನ್ನೆಚ್ಚರಿಕೆಯಾಗಿ 7 ಮೇವು ಬ್ಯಾಂಕ್‌ಗಳನ್ನು ತೆರೆಯಲು ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.
“ಬರ ಪರಿಸ್ಥಿತಿಯನ್ನು ಲಘುವಾಗಿ ಪರಿಗಣಿಸಬೇಡಿ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುಂಚಿತವಾಗಿ ಕ್ರಮ ಕೈಗೊಳ್ಳಬೇಕು.”
ಸಂತೋಷ ಲಾಡ್, ಸಂಪುಟ ದರ್ಜೆ ಸಚಿವ



