HomeBengaluru Newsಕಾಂಗ್ರೆಸ್ ಬಂಡಾಯ ಶಮನಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್; ಕೃಷ್ಣಪ್ಪ, ಯಶವಂತರಾಯಗೌಡ ರಾಜೀನಾಮೆ ನಿರ್ಧಾರ ವಾಪಸ್?

ಕಾಂಗ್ರೆಸ್ ಬಂಡಾಯ ಶಮನಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್; ಕೃಷ್ಣಪ್ಪ, ಯಶವಂತರಾಯಗೌಡ ರಾಜೀನಾಮೆ ನಿರ್ಧಾರ ವಾಪಸ್?

For Dai;y Updates Join Our whatsapp Group

ಬೆಂಗಳೂರು: ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಶಾಸಕರ ಬಂಡಾಯ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿವೆ.

ಸಂಪುಟ ವಿಸ್ತರಣೆ ಬಳಿಕ ಉಂಟಾಗಿದ್ದ ಅಸಮಾಧಾನವನ್ನು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ವತಃ ಅಖಾಡಕ್ಕಿಳಿದಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಇದೀಗ ತಮ್ಮ ರಾಜೀನಾಮೆ ನಿರ್ಧಾರವನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಶಾಸಕ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ ಶಾಸಕ ಪ್ರಿಯಕೃಷ್ಣ ಅವರ ಮನವೊಲಿಸುವಲ್ಲಿಯೂ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಬುಧವಾರ ರಾತ್ರಿ ವಿಜಯನಗರದಲ್ಲಿರುವ ಕೃಷ್ಣಪ್ಪ ಅವರ ನಿವಾಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಸಚಿವರಾದ ಜಮೀರ್ ಅಹ್ಮದ್ ಖಾನ್, ಎಚ್.ಸಿ. ಬಾಲಕೃಷ್ಣ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸುರ್ಜೇವಾಲಾ, ಪಕ್ಷದಲ್ಲಿ ಯಾವುದೇ ಭಿನ್ನಮತ ಅಥವಾ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷದಿಂದ ಕೆಲವು ತಪ್ಪುಗಳಾಗಿರುವುದು ನಿಜವಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಸರಿಪಡಿಸಲಾಗುವುದು ಎಂದು ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ಅವರಿಗೆ ಭರವಸೆ ನೀಡಲಾಗಿದೆ ಎನ್ನಲಾಗಿದೆ.

ಶಾಸಕ ಎಂ. ಕೃಷ್ಣಪ್ಪ ಮಾತನಾಡಿ, “ತಪ್ಪಾಗಿದೆ, ಸರಿಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸಚಿವ ಸ್ಥಾನ ಹೊರತುಪಡಿಸಿ ಬೇರೆ ಯಾವುದೇ ಸ್ಥಾನ ನೀಡಿದರೂ ಒಪ್ಪಿಗೆ ಇಲ್ಲ” ಎಂದು ಹೇಳಿದ್ದಾರೆ.

ಇನ್ನು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರ ಅಸಮಾಧಾನವನ್ನು ಶಮನಗೊಳಿಸಲು ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಬಿ.ಕೆ. ಹರಿಪ್ರಸಾದ್ ಅವರು ಹೆಚ್.ಕೆ. ಪಾಟೀಲ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರ ನಿವಾಸಕ್ಕೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಅಶೋಕ್ ಪಟ್ಟಣ್ ಹಾಗೂ ಎನ್.ವೈ. ಗೋಪಾಲಕೃಷ್ಣ ಸೇರಿದಂತೆ ಅಸಮಾಧಾನಿತ ಶಾಸಕರನ್ನೂ ಮನವೊಲಿಸುವ ಪ್ರಯತ್ನ ನಡೆದಿದೆ.

ಆದರೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಕೆಲ ಶಾಸಕರ ಅಸಮಾಧಾನ ಮುಂದುವರಿದಿದೆ. ಗುಬ್ಬಿ ಶ್ರೀನಿವಾಸ್, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹಾಗೂ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸೇರಿದಂತೆ ಕೆಲ ನಾಯಕರು ಇನ್ನೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇಂದು ಬಂಗಾರಪೇಟೆ ಬಂದ್‌ಗೆ ಎಸ್.ಎನ್. ನಾರಾಯಣಸ್ವಾಮಿ ಬೆಂಬಲಿಗರು ಕರೆ ನೀಡಿದ್ದು, ಹಾವೇರಿಯಲ್ಲಿ ಶಾಸಕ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬೆಂಬಲಿಗರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಇದರ ನಡುವೆ ಸಚಿವ ಸಂಪುಟದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಆಡಿಯೋ ವಿಚಾರವನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. “ಇದು ಪೇಮೆಂಟ್ ಸಂಪುಟ” ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ಸಚಿವ ಸ್ಥಾನ ವಂಚಿತ ಶಾಸಕರ ಅಸಮಾಧಾನ ಸದ್ಯಕ್ಕೆ ಕಡಿಮೆಯಾದಂತೆ ಕಂಡರೂ, ಕಾಂಗ್ರೆಸ್ ಒಳಗಿನ ಈ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img