HomeKarnataka Newsಪುತ್ರಿಗಾಗಿ ನಾನು ಸಚಿವ ಸ್ಥಾನ ಬಿಡುತ್ತೇನೆ ಎಂಬ ವದಂತಿ ಸುಳ್ಳು: ಎಲ್ಲ ಗೊಂದಲಗಳಿಗೆ ತೆರೆ ಎಳೆದ...

ಪುತ್ರಿಗಾಗಿ ನಾನು ಸಚಿವ ಸ್ಥಾನ ಬಿಡುತ್ತೇನೆ ಎಂಬ ವದಂತಿ ಸುಳ್ಳು: ಎಲ್ಲ ಗೊಂದಲಗಳಿಗೆ ತೆರೆ ಎಳೆದ ಕೆ.ಹೆಚ್. ಮುನಿಯಪ್ಪ!

For Dai;y Updates Join Our whatsapp Group

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯ ಬಳಿಕ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳು ಜೋರಾಗಿರುವ ನಡುವೆಯೇ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಪುತ್ರಿ ಹಾಗೂ ಕೆಜಿಎಫ್ ಶಾಸಕಿಯಾದ ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ಕಲ್ಪಿಸಲು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯನ್ನು ಅವರ ಕಚೇರಿ ಸ್ಪಷ್ಟವಾಗಿ ತಳ್ಳಿಹಾಕಿದೆ.

ಈ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅವರ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ “ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡಲು ಮುನಿಯಪ್ಪ ಸಚಿವ ಸ್ಥಾನ ತ್ಯಜಿಸಲಿದ್ದಾರೆ” ಎಂಬ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದೆ.

ಪ್ರಕಟಣೆಯಲ್ಲಿ, ಕೆ.ಎಚ್. ಮುನಿಯಪ್ಪ ಕಳೆದ ಐದು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಹಿರಿಯ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇಂದಿರಾ ಗಾಂಧಿಯವರ ಕಾಲದಿಂದಲೂ ಪಕ್ಷವನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿರುವ ಅವರು, ಕುಟುಂಬ ಸಮೇತ ಕಾಂಗ್ರೆಸ್ ಸಿದ್ಧಾಂತಗಳಿಗೆ ಬದ್ಧರಾಗಿದ್ದಾರೆ ಎಂದು ಹೇಳಲಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮುನಿಯಪ್ಪ, ಕೇಂದ್ರದಲ್ಲಿ ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಶಂಕರಾನಂದ ಹಾಗೂ ಜಾಫರ್ ಶರೀಫ್ ನಂತರ ಅತ್ಯಧಿಕ ಬಾರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕರಲ್ಲಿ ಅವರೂ ಒಬ್ಬರು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ರಾಜ್ಯ ಸರ್ಕಾರದಲ್ಲಿ ಆಹಾರ ಇಲಾಖೆಯ ಸಚಿವರಾಗಿರುವ ಮುನಿಯಪ್ಪ, ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ ನೀಡುವಂತೆ ಕಾಂಗ್ರೆಸ್ ನಾಯಕತ್ವದ ಗಮನಕ್ಕೆ ಮನವಿ ಮಾಡಿರುವುದಾಗಿ ಪ್ರಕಟಣೆ ತಿಳಿಸಿದೆ. ಈ ಕುರಿತು ಪಕ್ಷದ ವರಿಷ್ಠರಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ ಎಂದೂ ಹೇಳಲಾಗಿದೆ.

ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಯಾವುದೇ ವಾಸ್ತವಿಕತೆ ಇಲ್ಲ. ಪರಿಶೀಲಿಸದ ಮಾಹಿತಿಯನ್ನು ನಂಬಬಾರದು ಎಂದು ಸಚಿವರ ಕಚೇರಿ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ಮನವಿ ಮಾಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img