HomeGadag Newsಕಚೇರಿಯಲ್ಲಿ ಕುಳಿತು ವರದಿ ಬೇಡ; ಜಮೀನಿಗೆ ಹೋಗಿ ವಾಸ್ತವ ಸ್ಥಿತಿ ತಿಳಿಯಿರಿ: ಸಚಿವ ಬಸವರಾಜ ರಾಯರೆಡ್ಡಿ

ಕಚೇರಿಯಲ್ಲಿ ಕುಳಿತು ವರದಿ ಬೇಡ; ಜಮೀನಿಗೆ ಹೋಗಿ ವಾಸ್ತವ ಸ್ಥಿತಿ ತಿಳಿಯಿರಿ: ಸಚಿವ ಬಸವರಾಜ ರಾಯರೆಡ್ಡಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕಚೇರಿಯಲ್ಲಿ ಕುಳಿತು ವರದಿ ತಯಾರಿಸುವ ಬದಲು ರೈತರ ಜಮೀನುಗಳಿಗೆ ತೆರಳಿ ವಾಸ್ತವ ಸ್ಥಿತಿ ಪರಿಶೀಲಿಸಿ ಮಾಹಿತಿ ಸಲ್ಲಿಸಬೇಕು. ಮುಂದಿನ ವಾರ ನಡೆಯುವ ಎರಡನೇ ಹಂತದ ಪರಿಶೀಲನಾ ಸಭೆಯೊಳಗೆ ಸಮರ್ಪಕ ವರದಿ ನೀಡದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜೂನ್ 1ರಿಂದ ಆಗಸ್ಟ್ 7ರವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.31ರಷ್ಟು ಮಳೆ ಕೊರತೆ ದಾಖಲಾಗಿದ್ದು, ಎನ್‌ಡಿಆರ್‌ಎಫ್ ನಿಯಮಾವಳಿಗಳ ಪ್ರಕಾರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಅಗತ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕುವಾರು ವೈಜ್ಞಾನಿಕ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

164 ಕೋಟಿ ರೂ. ಬೆಳೆ ಹಾನಿ

ಪ್ರಾಥಮಿಕ ಅಂದಾಜಿನಂತೆ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸೇರಿ 164 ಕೋಟಿ ರೂ. ಮೌಲ್ಯದ ಬೆಳೆ ಹಾನಿ ಸಂಭವಿಸಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಶೇ.75ರಷ್ಟು ರೈತರು ವಿಮೆ ಮಾಡಿಸಿದ್ದು, ಶೇ.80ರಷ್ಟು ಬೆಳೆ ಹಾನಿಯಾಗಿರುವ ಸಾಧ್ಯತೆಯಿದೆ. ವಿಮಾ ಕಂಪನಿಗಳ ಮೂಲಕ ರೈತರಿಗೆ ಶೀಘ್ರ ಪರಿಹಾರ ದೊರಕಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಮೆ ಮಾಡಿಸದ ರೈತರಿಗೆ ಎಸ್‌ಡಿಆರ್‌ಎಫ್ ನಿಯಮಾವಳಿಗಳಡಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಕುಡಿಯುವ ನೀರು, ಉದ್ಯೋಗಕ್ಕೂ ಆದ್ಯತೆ

ಡಿಬಿಒಟಿ ಯೋಜನೆಯಡಿ ಕುಡಿಯುವ ನೀರು ಪೂರೈಕೆಯಲ್ಲಿ ಕಂಡುಬಂದಿರುವ ಲೋಪಗಳನ್ನು ತಕ್ಷಣ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಬಿಜಿ ರಾಮ್‌ಜಿ ಯೋಜನೆಯಡಿ ಈಗಾಗಲೇ 18 ಸಾವಿರಕ್ಕೂ ಹೆಚ್ಚು ಮಾನವ ದಿನಗಳು ಸೃಷ್ಟಿಯಾಗಿದ್ದು, ಕೂಲಿ ಕಾರ್ಮಿಕರಿಗೆ ಕೆಲಸದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಸದ್ಯ ಮೇವು ಕೊರತೆ ಇಲ್ಲ. ಅಗತ್ಯವಿದ್ದರೆ ತಕ್ಷಣ ಗೋಶಾಲೆಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಚ್.ಕೆ. ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ್ ಕೆ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಕಚೇರಿಯಲ್ಲಿ ಕುಳಿತು ವರದಿ ತಯಾರಿಸಬೇಡಿ; ಜಮೀನಿಗೆ ಹೋಗಿ ರೈತರ ಸಮ್ಮುಖದಲ್ಲೇ ವಾಸ್ತವ ಸ್ಥಿತಿ ಪರಿಶೀಲಿಸಿ. ನಿರ್ಲಕ್ಷ್ಯ ತೋರಿದರೆ ಶಿಸ್ತುಕ್ರಮ ಅನಿವಾರ್ಯ.”

– ಸಚಿವ ಬಸವರಾಜ ರಾಯರೆಡ್ಡಿ, ಉಸ್ತುವಾರಿ ಸಚಿವ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img