ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಶುಕ್ರವಾರ ಗದಗ ಹಾಗೂ ಮುಂಡರಗಿ ತಾಲೂಕಿನ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿದರು. ಬೆಳೆ ನಷ್ಟದ ನೈಜ ಚಿತ್ರಣ ದಾಖಲಿಸಿ, ಯಾವುದೇ ಅರ್ಹ ರೈತ ಸರ್ಕಾರದ ಪರಿಹಾರದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮೊದಲು ಗದಗ ತಾಲೂಕಿನ ಗಂಗಿಮಡಿ ಬಳಿಯ ಜಮೀನಿಗೆ ಭೇಟಿ ನೀಡಿದ ಸಚಿವರು, ಶೇಂಗಾ, ಹೆಸರು ಹಾಗೂ ಮೆಣಸಿನಕಾಯಿ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದರು. ಮಳೆಯ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿರುವುದು, ತೇವಾಂಶದ ಅಭಾವದಿಂದ ಬೆಳೆಗಳು ಒಣಗುತ್ತಿರುವ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದ ಜಮೀನಿಗೆ ಭೇಟಿ ನೀಡಿ ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಮಳೆ ಅಭಾವದಿಂದ ಬೆಳೆಗಳು ಬಾಡುತ್ತಿರುವುದು ಹಾಗೂ ಇದೇ ಪರಿಸ್ಥಿತಿ ಮುಂದುವರಿದರೆ ಹೆಚ್ಚಿನ ನಷ್ಟ ಸಂಭವಿಸುವ ಸಾಧ್ಯತೆ ಕುರಿತು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.
ಪರಿಶೀಲನೆ ವೇಳೆ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದ ಸಚಿವರು, ಬಿತ್ತನೆ ವೆಚ್ಚ, ನೀರಿನ ಕೊರತೆ, ಬೆಳೆ ಹಾನಿ ಹಾಗೂ ಎದುರಾಗಿರುವ ಸಂಕಷ್ಟಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಬೆಳೆ ಹಾನಿ ಮೌಲ್ಯಮಾಪನವನ್ನು ಪಾರದರ್ಶಕವಾಗಿ ನಡೆಸಿ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರ ಜಮೀನುಗಳಿಗೆ ತೆರಳಿ ನೈಜ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಯಾವುದೇ ಅರ್ಹ ರೈತರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿದೆ. ಜಿಲ್ಲೆಯ ಬೆಳೆ ಹಾನಿಯ ಸಂಪೂರ್ಣ ವರದಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, ಅಗತ್ಯ ನೆರವು ಮತ್ತು ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಪರಿಶೀಲನೆ ಸಂದರ್ಭದಲ್ಲಿ ಶಾಸಕರಾದ ಎಚ್.ಕೆ. ಪಾಟೀಲ, ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ರೈತರು ಉಪಸ್ಥಿತರಿದ್ದರು.
“ಬೆಳೆ ಹಾನಿಯ ನೈಜ ವರದಿ ಸಿದ್ಧಪಡಿಸಿ, ಸರ್ಕಾರದ ಪರಿಹಾರ ಪ್ರತಿಯೊಬ್ಬ ಅರ್ಹ ರೈತನಿಗೂ ತಲುಪಬೇಕು. ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ.”
– ಬಸವರಾಜ ರಾಯರಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ



