ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ರಸ್ತೆ ಬದಿಯಲ್ಲಿ ಸಿಲಿಂಡರ್‌ಗಳನ್ನು ತುಂಬಿಕೊಂಡಿದ್ದ ಲಾರಿಯನ್ನು ನಿಲ್ಲಿಸಲಾಗಿತ್ತು. ಈ ವೇಳೆ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಐವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಪ್ರೇಮ್ ಕುಮಾರ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ:
ಮೃತರು ಹಾಗೂ ಗಾಯಾಳುಗಳು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ಐವರು ಸ್ನೇಹಿತರು ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಕೊಟ್ಟಿಗೆಹಾರ ಬಳಿ ಕಾರು ನಿಂತಿದ್ದ ಸಿಲಿಂಡರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಸ್ಥಳೀಯರು ಮತ್ತು ಪೊಲೀಸರು ಹರಸಾಹಸಪಟ್ಟರು.
ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ:
ಘಟನೆ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪಘಾತದಿಂದ ಕೆಲಕಾಲ ಈ ಭಾಗದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿ ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.



