ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗದಗ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಸತತ ಎರಡನೇ ದಿನವೂ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸಿದರು.
ಶನಿವಾರ ಶಿರಹಟ್ಟಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಎರಡೂ ತಾಲೂಕುಗಳ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಮಳೆಯ ಪ್ರಮಾಣ, ಬಿತ್ತನೆ ಪ್ರದೇಶ, ಬೆಳೆಗಳ ಸ್ಥಿತಿ, ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.
ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೆಳೆ ಹಾನಿಯ ವಾಸ್ತವಿಕ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಿದರು.
ಸಭೆಯ ಬಳಿಕ ಸಚಿವ ರಾಯರಡ್ಡಿ ಅವರು ಛಬ್ಬಿ ಗ್ರಾಮಕ್ಕೆ ತೆರಳಿ ಮೆಕ್ಕೆಜೋಳದ ಜಮೀನಿನಲ್ಲಿ ಬೆಳೆ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. ಮಳೆಯ ಕೊರತೆಯಿಂದ ಬೆಳೆಗಳ ಬೆಳವಣಿಗೆಗೆ ಉಂಟಾಗಿರುವ ಪರಿಣಾಮವನ್ನು ವೀಕ್ಷಿಸಿ, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದರು.
ಈ ವೇಳೆ ರೈತರು ಮಳೆ ಕೊರತೆ, ಬೆಳೆ ಹಾನಿ ಹಾಗೂ ಕೃಷಿ ಚಟುವಟಿಕೆಗಳಲ್ಲಿನ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ರೈತರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಶೀಲಿಸಿ ವಾಸ್ತವಿಕ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ರಾಯರಡ್ಡಿ, ಬರ ಪರಿಸ್ಥಿತಿಯಿಂದ ರೈತರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಶಿರಹಟ್ಟಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಜಂಟಿ ನಿರ್ದೇಶಕ ಚಿದಾನಂದ, ಶಿರಹಟ್ಟಿ ತಹಶೀಲ್ದಾರ್ ರಾಘವೇಂದ್ರ, ಲಕ್ಷ್ಮೇಶ್ವರ ತಹಶೀಲ್ದಾರ್ ಧನಂಜಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
“ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಸ್ಥಳೀಯವಾಗಿ ಪರಿಶೀಲಿಸಿ ವಾಸ್ತವಿಕ ವರದಿ ಸಲ್ಲಿಸಬೇಕು. ಬರ ಪರಿಸ್ಥಿತಿಯಿಂದ ರೈತರಿಗೆ ತೊಂದರೆಯಾಗದಂತೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು.”
— ಬಸವರಾಜ ರಾಯರಡ್ಡಿ, ಸಂಪುಟ ದರ್ಜೆ ಸಚಿವ



