ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಮುಖಂಡ ಶಂಕರಗೌಡ ಜಯನಗೌಡ್ರ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ನಡೆಸಿದ ರೈತರು, ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಂಕರಗೌಡ ಜಯನಗೌಡ್ರ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ನಷ್ಟವಾಗಿವೆ. ಬಿತ್ತನೆ, ಬೀಜ, ಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹಣ ಖರ್ಚು ಮಾಡಿರುವ ರೈತರು ಇದೀಗ ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಬರಪೀಡಿತ ಪ್ರದೇಶದ ನಿಯಮದಂತೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ಪ್ರತಿ ಹೋಬಳಿ ಮಟ್ಟದಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಬೇಕು. ರೈತರು ಕೃಷಿ ಚಟುವಟಿಕೆಗಳಿಗಾಗಿ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಪಡೆದಿರುವ ಬೆಳೆ ಸಾಲವನ್ನು ಬರಗಾಲದ ಹಿನ್ನೆಲೆಯಲ್ಲಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
2025–26ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಹಲವು ರೈತರು ವಿಮೆ ಪಾವತಿಸಿದ್ದರೂ, ತಾಂತ್ರಿಕ ಹಾಗೂ ಇತರೆ ಕಾರಣಗಳಿಂದ ಕೆಲವರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಈ ಕುರಿತು ಕೂಡಲೇ ಪರಿಶೀಲನೆ ನಡೆಸಿ, ಅರ್ಹ ರೈತರಿಗೆ ಸಂಪೂರ್ಣ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಪುನರ್‌ಪರಿಶೀಲಿಸಿ ಅರ್ಹರಿಗೆ ನ್ಯಾಯ ದೊರಕಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
1978ರಿಂದ ಅರಣ್ಯ ಒತ್ತುವರಿದಾರರು ಹಾಗೂ ಬಗರಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ದೊರೆಯದೆ ಇರುವ ಪ್ರಕರಣಗಳನ್ನು ತ್ವರಿತವಾಗಿ ಪರಿಶೀಲಿಸಿ, ಅರ್ಹರಿಗೆ ಅರಣ್ಯ ಹಕ್ಕುಪತ್ರ ಹಾಗೂ ಪಟ್ಟಾ ನೀಡಬೇಕು. ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಹಾಗೂ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದ ದೊರೆಯಬೇಕಾದ ಸಹಾಯಧನ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿ ಅರ್ಹ ರೇಷ್ಮೆ ಬೆಳೆಗಾರರಿಗೆ ಕೂಡಲೇ ಸಹಾಯಧನ ಒದಗಿಸಬೇಕು ಎಂದು ಆಗ್ರಹಿಸಿದರು.
“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವು ಉತ್ತಮ ಯೋಜನೆಗಳನ್ನು ಜಾರಿಗೊಳಿಸಿದ್ದರೂ, ಭ್ರಷ್ಟ ಅಧಿಕಾರಿಗಳಿಂದಾಗಿ ಅವು ನಿಜವಾದ ರೈತರಿಗೆ ತಲುಪದಿರುವುದು ವಿಪರ್ಯಾಸ. ರೈತರಿಗೆ ಸಿಗಬೇಕಾದ ಸೌಲಭ್ಯಗಳು ಮಧ್ಯವರ್ತಿಗಳ ಪಾಲಾಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.”
— ಶಂಕರಗೌಡ ಜಯನಗೌಡ್ರ, ರೈತ ಸಂಘದ ಜಿಲ್ಲಾಧ್ಯಕ್ಷ



