ವಿಜಯಸಾಕ್ಷಿ ಸುದ್ದಿ, ಗದಗ: ರಾಯಚೂರು ಜಿಲ್ಲೆಯ ಸಂಕೇಶ್ವರಹಾಳದಲ್ಲಿ ಮಾದಿಗ ಸಮಾಜದ ಮುಖಂಡ ಭೂಮಾನಂದ ಹಬ್ಬಿನಹಾಳ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಉಡಚಪ್ಪ ಹಳ್ಳಿಕೇರಿ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಾನಂದ ಹಬ್ಬಿನಹಾಳ ಅವರ ಹತ್ಯೆ ಖಂಡನೀಯ. ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶೀಘ್ರ ತೀರ್ಪು ನೀಡುವ ಮೂಲಕ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಮೃತರ ಕುಟುಂಬಕ್ಕೆ ಸರ್ಕಾರದಿಂದ ₹50 ಲಕ್ಷ ಪರಿಹಾರ, 10 ಎಕರೆ ಜಮೀನು ಮಂಜೂರು ಮಾಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ರಾಯಚೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ರೋಣ ತಾಲೂಕಿನಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ಗಡಿಪಾರು ಮಾಡಬೇಕು. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕುಂಬಾರಕೊಪ್ಪದಲ್ಲಿ ಮಾದಿಗ ಸಮಾಜದ ವ್ಯಕ್ತಿಯ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ದಾವಣಗೆರೆಯಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸವಡಿಯ ಮರುಳಸಿದ್ದ ಸ್ವಾಮೀಜಿ, ಮಾದಿಗ ಮಹಾಸಭಾದ ಗೌರವಾಧ್ಯಕ್ಷ ವಿಜಯ ಕಲ್ಮನಿ, ಮೈಲಾರಪ್ಪ, ಚಂದ್ರು, ಸುನಿಲ್ ಬಂಡೆನ್ನವರ, ರಾಘವೇಂದ್ರ ಹಾಗೂ ವಿನಾಯಕ ಕಟ್ಟಿಮನಿ ಉಪಸ್ಥಿತರಿದ್ದರು.
“ದೇಶಕ್ಕೆ ಸ್ವಾತಂತ್ರ್ಯ ದೊರೆತು ಹಲವು ವರ್ಷಗಳು ಕಳೆದರೂ ದಲಿತರ ಮೇಲಿನ ದೌರ್ಜನ್ಯಗಳು ಮುಂದುವರಿದಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ಹಾಗೂ ಆಡಳಿತ ವ್ಯವಸ್ಥೆ ಶಾಂತಿಸಭೆ, ಮುಂಜಾಗ್ರತಾ ಕ್ರಮ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.”
— ಉಡಚಪ್ಪ ಹಳ್ಳಿಕೇರಿ, ಅಧ್ಯಕ್ಷರು, ಮಾದಿಗ ಮಹಾಸಭಾ ಜಿಲ್ಲಾ ಘಟಕ



