ಶಿವಮೊಗ್ಗ: ಶಾಲೆಯಲ್ಲಿ ಚೆಸ್ ಆಟ ವೀಕ್ಷಿಸುತ್ತಿದ್ದ ವೇಳೆ ಏಕಾಏಕಿ ಕುಸಿದುಬಿದ್ದ SSLC ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಜಿ.ಕೆ. ವಿನಯ್ (15) ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಇತರ ವಿದ್ಯಾರ್ಥಿಗಳು ಚೆಸ್ ಆಡುತ್ತಿದ್ದುದನ್ನು ವಿನಯ್ ಕುಳಿತು ನೋಡುತ್ತಿದ್ದ ವೇಳೆ ದಿಢೀರ್ ಕುಸಿದುಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
ಆದರೆ ವಿನಯ್ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಈ ವೇಳೆ ಮಾರ್ಗಮಧ್ಯೆಯೇ ವಿನಯ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ವಿನಯ್‌ನ ತಂದೆ-ತಾಯಿ ಶಿಕಾರಿಪುರದವರಾಗಿದ್ದು, ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದು ವ್ಯಾಸಂಗ ಮಾಡುತ್ತಿದ್ದ. ವಿದ್ಯಾರ್ಥಿಯ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಶಾಲಾ ಶಿಕ್ಷಕರು, ಸಹಪಾಠಿಗಳು ಆಘಾತಕ್ಕೊಳಗಾಗಿದ್ದಾರೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಇನ್ನು ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ವಿನಯ್ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



